ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳ ದಾಳಿಯನ್ನು ಕಾಂಗ್ರೆಸ್‌ನ ನಾಯಕರು ಖಂಡಿಸಿದ್ದಾರೆ.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಶಕ್ತಿಯನ್ನು ಕುಗ್ಗಿಸಲು ಮಾಡಿದ ಷಡ್ಯಂತ್ರ. ಬಿಜೆಪಿ ಸಿಬಿಐ ಕೈಗೊಂಬೆಯಾಗಿಸಿಕೊಂಡು ಕಾಂಗ್ರೆಸ್ ನಾಯಕರ ಮನೆ ಮೇಲೆ ದಾಳಿ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಕೆ ಶಿವಕುಮಾರ್ ಅವರ ಮೇಲಿನ ಈ ದಾಳಿಯಿಂದ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಭ್ರಷ್ಟಾಚಾರದ ಎಳೆಯನ್ನು ಸಿಬಿಐ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಹುಡುಕಬೇಕು. ಆದರೆ ಮೋದಿ ಸರ್ಕಾರ ಸಿಬಿಐಯನ್ನು ಕೈಗೊಂಬೆ ಮಾಡಿಕೊಂಡು ಕಾಂಗ್ರೆಸ್ ನಾಯಕ ಮೇಲೆ ದಾಳಿ ನಡೆಸುತ್ತಿದೆ. ಇಂತಹ ಕುತಂತ್ರಗಳಿಂದ ಕಾಂಗ್ರೆಸ್‌ನ ಕಾರ್ಯಕರ್ತರು ಮತ್ತು ನಾಯಕರು ಬಗ್ಗುವುದಿಲ್ಲ. ಇದರಿಂದ ಕಾಂಗ್ರೆಸ್ ಇನ್ನಷ್ಟು ಸದೃಢವಾಗಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಟ್ವೀಟ್ ನಲ್ಲಿ ಹೇಳಿದ್ದಾರೆ
ಸಿದ್ದರಾಮಯ್ಯ ಖಂಡನೆ:
ಡಿಕೆ ಶಿವಕುಮಾರ್ ಅವರ ಮೇಲೆ ನಡೆದಿರುವ ಇವತ್ತಿನ ಸಿಬಿಐ ದಾಳಿಯು ಉಪಚುನಾವಣೆಯಲ್ಲಿನ ನಮ್ಮ ಸಿದ್ಧತೆಯನ್ನು ಹಳಿ ತಪ್ಪಿಸುವ ಮತ್ತೊಂದು ಪ್ರಯತ್ನವಾಗಿದೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದೂ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.