ಬಿಜೆಪಿ ಮುಖಂಡನ ಅಮಾನವೀಯ ಹತ್ಯೆ: ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಶಿಕ್ಷಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ .

ತಮ್ಮ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ ಎಂದಿದ್ದಾರೆ.

ಘಟನೆ ಬಗ್ಗೆ ಗೃಹ ಸಚಿವರಿಂದ ಪ್ರತಿಕ್ರಿಯೆ

ಮಂಗಳವಾರ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವ ವೇಳೆ ಈ ಘಟನೆ ನಡೆದಿದೆ. ಇದು ದುರದೃಷ್ಟಕರ ಸಂಗತಿಯಾಗಿದೆ. ಸೈದ್ಧಾಂತಿಕವಾಗಿ ಏನೇ ಭಿನ್ನಾಭಿಪ್ರಾಯ ಇರಬಹುದು. ಆದರೆ ಕೊಲೆಯಂತಹ ಕೃತ್ಯಗಳು ನಡೆಯಬಾರದು. ಘಟನಾ ಸ್ಥಳದಲ್ಲಿ ದೊಡ್ದ ಪ್ರಮಾಣದಲ್ಲಿ ಪೋಲೀಸರ ನಿಯೋಜನೆಯಾಗಿದೆ. ಶಾಂತಿ, ಸುವ್ಯವಸ್ಥೆ ಕಾಪಾಡಿಕೊಳ್ಳಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಸಾರ್ವಜನಿಕರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇವೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತೇವೆ. ಕರಾವಳಿಯಲ್ಲಿ ಬಹಳ ವರ್ಷಗಳಿಂದ ಇಂತಹ ಘಟನೆಗಳು ನಡೆಯುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಈಗಾಗಲೇ ತನಿಖೆಯನ್ನ ನಡೆಸುತ್ತಿದ್ದಾರೆ ಎಂದಿದ್ದಾರೆ.