ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಮೊದಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು.
ಸಿದ್ದರಾಮಯ್ಯ ಅವರು ಮರದಲ್ಲಿ ತಯಾರಿಸಿದ ಆನೆಯ ವಿಗ್ರಹ ಮತ್ತು ಹಾರವನ್ನು ಪ್ರಧಾನಿ ಮೋದಿ ಅವರಿಗೆ ನೀಡಿದರು. ಪಿಎಂಒ ಟ್ವೀಟ್ ಮಾಡಿರುವ ಚಿತ್ರದಲ್ಲಿ ಪ್ರಧಾನಿ ಮೋದಿ ಅವರು ಕರ್ನಾಟಕದ ಸಾಂಪ್ರದಾಯಿಕ ಪೇಟ ಮತ್ತು ಶಾಲನ್ನು ತೊಟ್ಟಿದ್ದಾರೆ.
ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದ ನಂತರ, ಇದು ಪ್ರಧಾನಿಯೊಂದಿಗಿನ ಅವರ ಮೊದಲ ಭೇಟಿಯಾಗಿದೆ. ಬಳಿಕ, ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಲಿದ್ದಾರೆ.
2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಮುಖ್ಯಮಂತ್ರಿಗಳು ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಸಚಿವರುಗಳೊಂದಿಗೆ ಆಗಸ್ಟ್ 2 ರಂದು ನವದೆಹಲಿಯಲ್ಲಿ ಪಕ್ಷದ ನಾಯಕತ್ವದೊಂದಿಗೆ ಸಭೆ ನಡೆಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.