ಬಾಲ ಕಾರ್ಮಿಕರ ಪತ್ತೆಗೆ ದಾಳಿ ನಡೆಸಿ: ಉಡುಪಿ ಅಪರ ಜಿಲ್ಲಾಧಿಕಾರಿ

ಉಡುಪಿ :ಜಿಲ್ಲೆಯಲ್ಲಿ ಕಾರ್ಖಾನೆಗಳು ಸೇರಿದಂತೆ ಹಲವು ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿರುವ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲು ಅನಿರೀಕ್ಷಿತ ದಾಳಿಗಳನ್ನು ನಡೆಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸೂಚಿಸಿದ್ದಾರೆ.

 ಅವರು ಗುರುವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 ಬಾಲ ಕಾರ್ಮಿಕ ವಿರೋಧಿ ದಿನ ಆಚರಣೆಗೆ ಮಾತ್ರ ಸಲ್ಲದು, ವಿವಿಧ ಉದ್ದಿಮೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ ಅವರಿಗೆ ಸೂಕ್ತ ಪುರ್ನವಸತಿ ಕಲ್ಪಿಸಬೇಕಾಗಿದ್ದು, ಜಿಲ್ಲೆಯ ವಿವಿಧ ಸಂಸ್ಥೆಗಳು, ಉದ್ದಿಮೆಗಳಿಗೆ, ಸಂಬಂದಪಟ್ಟ ಇಲಾಖೆಗಳೊಂದಿಗೆ ಅನಿರೀಕ್ಷಿತ ದಾಳಿ ನಡೆಸಿ, ಬಾಲ ಕಾರ್ಮಿಕರನ್ನು ಪತ್ತೆ ಹಚ್ಚುವ ಜೊತೆಗೆ, ಸಂಬಂದಪಟ್ಟ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ದ ಪ್ರಕರಣ ದಾಖಲಿಸುವುದರ ಮೂಲಕ, ಬಾಲ ಕಾರ್ಮಿಕರನ್ನು ಬಳಸಿಕೊಳ್ಳುವವರಿಗೆ ಸೂಕ್ತ ಎಚ್ಚರಿಕೆ ನೀಡಬೇಕು ಎಂದು ಹೇಳಿದ ಅಪರ ಜಿಲ್ಲಾಧಿಕಾರಿ, ವಲಸೆ ಕಾರ್ಮಿಕರಲ್ಲಿ ಬಾಲ ಕಾರ್ಮಿಕರ ಕುರಿತಂತೆ ಹೆಚ್ಚಿನ ಅರಿವು ಮೂಡಿಸಿ ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಬಾಲಕೃಷ್ಣ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.