ಇಳಿಕೆಯಾಗದ ಕೋವಿಡ್ ಸೋಂಕು: ರಾಜ್ಯದ 8 ಜಿಲ್ಲೆಗಳಲ್ಲಿ ಕಠಿಣ ನಿಯಮ ಜಾರಿಗೊಳಿಸುವಂತೆ ಸಿಎಂ ಸೂಚನೆ

ಬೆಂಗಳೂರು: ಕೋವಿಡ್‌ ದೃಢಪಡುವ ಪ್ರಮಾಣವನ್ನು ಶೇ. 5ಕ್ಕಿಂತ ಕಡಿಮೆಗೊಳಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಕಠಿಣ ನಿಯಮ ಜಾರಿಗೊಳಿಸುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೋವಿಡ್ ಎರಡನೇ ಅಲೆ ತೀವ್ರಗೊಂಡಿರುವ ಕಾರಣ ರಾಜ್ಯ ಸರ್ಕಾರ ಕೈಗೊಂಡಿರುವ ಕಠಿಣ ನಿರ್ಬಂಧಗಳಿಂದಾಗಿ ಸೋಂಕಿನ ತೀವ್ರತೆ ಇಳಿಮುಖವಾಗುತ್ತಿದೆ. ಆದರೆ, ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೋವಿಡ್ ಸಂಖ್ಯೆ ಇಳಿಕೆಯಾಗುತ್ತಿಲ್ಲ. ರಾಜ್ಯದ ಒಟ್ಟು ಪ್ರಕರಣಗಳಲ್ಲಿ 65 ಸಾವಿರ ಸಕ್ರಿಯ ಪ್ರಕರಣಗಳು ಈ ಎಂಟು ಜಿಲ್ಲೆಗಳಲ್ಲಿವೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ.

ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಗುರುವಾರ ಸಿಎಂ ವಿಡಿಯೊ ಸಂವಾದ ನಡೆಸಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೂನ್ ಮೊದಲ ವಾರದಲ್ಲಿ ಕೋವಿಡ್‌ ದೃಢ ಪ್ರಮಾಣ ಅತಿ ಹೆಚ್ಚು ಅಂದರೆ, ಸರಾಸರಿ ಶೇ 25.17 ದಾಖಲಾಗಿದೆ. ಮೈಸೂರಿನಲ್ಲಿಯೂ ಶೇ 22ರಷ್ಟಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತಿ ಸೋಂಕಿತರಿಗೆ ಸರಾಸರಿ ಕೇವಲ ಶೇ 6.1 ಸಂಪರ್ಕಿತರನ್ನು ಪತ್ತೆ ಹಚ್ಚಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳು ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಹೇಳಿದರು.