ಉಡುಪಿ: ಲಾರಿ ಮಾಲೀಕರ ಸಮಸ್ಯೆಗಳ ಪರಿಹಾರಕ್ಕೆ ಅ.5 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

ಉಡುಪಿ: ಉಡುಪಿ ಜಿಲ್ಲೆಯ ಲಾರಿ ಮಾಲೀಕರ ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ ಎಂದು ವರದಿಯಾಗಿದೆ.

ಮಾಹಿತಿಗಳ ಪ್ರಕಾರ ಅಕ್ಟೋಬರ್ 5 ರಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಉಡುಪಿ ಜಿಲ್ಲೆಯ ಸಂಸದರು, ಶಾಸಕರು, ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಭಾಗದ ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರು ಈ ಹಿಂದೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಜಂಟಿ ಸಭೆ ನಡೆಸಿ ಶೀಘ್ರ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದರು. ಈ ಬೆಳವಣಿಗೆಯನ್ನು ಆಧರಿಸಿ ಅಕ್ಟೋಬರ್ 4ರಂದು ಉಡುಪಿ ನಗರದಲ್ಲಿ ನಡೆಸಲು ಉದ್ದೇಶಿಸಿದ್ದ ಪಾದಯಾತ್ರೆಯನ್ನು ಲಾರಿ ಮಾಲೀಕರು ಹಿಂಪಡೆದಿದ್ದಾರೆ.

ಹೊಸ ಜಿಪಿಎಸ್ ವ್ಯವಸ್ಥೆ ವಿರೋಧಿಸಿ ಲಾರಿ ಮಾಲೀಕರ ಪ್ರತಿಭಟನೆ ಒಂದು ವಾರ ದಾಟಿದ್ದು, ಸಮಸ್ಯೆ ಬಗೆಹರಿಯುವವರೆಗೂ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಮುಖಂಡ ರಾಘವೇಂದ್ರ ಶೆಟ್ಟಿ ತಿಳಿಸಿದ್ದಾರೆ.