ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಿದ ಬಳಿಕವೇ ಕಾಲೇಜು ಶುರು

ಚಿಕ್ಕಬಳ್ಳಾಪುರ: 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಿ ನಂತರ ಕಾಲೇಜು ಆರಂಭಿಸುವ ಕುರಿತು ಪ್ರಾಥಮಿಕ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಲೇಜು ಆರಂಭದ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಈ ಬಗ್ಗೆ ಪ್ರಾಥಮಿಕ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗುವುದು. ಕಾಲೇಜು ವಿದ್ಯಾರ್ಥಿಗಳೆಲ್ಲರಿಗೂ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭಿಸಬಹುದು ಎಂದು ತಾಂತ್ರಿಕ ಸಲಹಾ ಸಮಿತಿಯು ಮುಖ್ಯಮಂತ್ರಿಗಳ ಸಭೆಯಲ್ಲಿ ಸಲಹೆ ನೀಡಿತ್ತು. ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಮತ್ತೆ ಚರ್ಚಿಸಲಾಗುವುದು. ವಿದ್ಯಾರ್ಥಿಗಳ ಕ್ಷೇಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ಆದ್ದರಿಂದ ಲಸಿಕೆ ಕೊಟ್ಟೇ ಕಾಲೇಜು ಆರಂಭಿಸಬೇಕೆಂದರೆ ಯಾವ ರೀತಿ, ಎಷ್ಟು ದಿನದೊಳಗೆ ಲಸಿಕಾ ಕಾರ್ಯಕ್ರಮ ಮಾಡಬೇಕೆಂದು ಚರ್ಚಿಸಲಾಗುವುದು ಎಂದರು. ಮೊದಲು ಉನ್ನತ ಶಿಕ್ಷಣ, ನಂತರ ಪ್ರೌಢಶಾಲೆ ಆರಂಭಿಸಬೇಕಾಗುತ್ತದೆ. ಸಣ್ಣ ಮಕ್ಕಳಿಗೆ ಮೊದಲೇ ಶಾಲೆ ಆರಂಭಿಸಲಾಗುವುದಿಲ್ಲ ಎಂದರು.