ಬೆಂಗಳೂರು: ರಾಜ್ಯಾದ್ಯಂತ ನಡೆದಿರುವ ಹಿಜಾಬ್ ಪ್ರಕರಣದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯನ್ನು ಫೆ.16ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ವಿಶ್ವವಿದ್ಯಾಲಯಗಳು, ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇದು ಅನ್ವಯಿಸುತ್ತದೆ.
ಆದರೆ, ಈ ಅವಧಿಯಲ್ಲಿ ಆನ್ಲೈನ್ ಬೋಧನೆ ಎಂದಿನಂತೆಯೇ ನಡೆಯಲಿದೆ. ಹಾಗೇಯೆ ಈಗಾಗಲೇ ನಡೆಯುತ್ತಿರುವ ಮತ್ತು ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.