ಕ್ರೀಡೆಯಿಂದ ಆತ್ಮವಿಶ್ವಾಸ ವೃದ್ಧಿ- ದಿನಕರ ಬಾಬು

ಉಡುಪಿ: ಕ್ರೀಡೆಯಲ್ಲಿ ಸೋಲು ಗೆಲುವುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡೆಯಿಂದ ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು.

ಅವರು ಸೋಮವಾರ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾಲಯ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ. ಜಿ. ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ, ಉಡುಪಿ ಜಿಲ್ಲಾ ಅಮೆಚೂರು ಅಥ್ಲೆಟಿಕ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 40ನೇ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಹಾಗೂ ಉಡುಪಿ ಜಿಲ್ಲಾ ಮಟ್ಟದ ಕಿರಿಯರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬರೂ ಯಾವುದಾದರೊಂದು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಪಠ್ಯೇತರ ಚಟುವಟಿಕೆಗಳ ಜೊತೆಗೆ ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಕರೆನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ಜಿಲ್ಲಾಧಿಕಾರಿ ಜಿ. ಜಗದೀಶ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ದ.ಕ ಮತ್ತು ಉಡುಪಿ ಮೀನು ಮಾರಾಟ ಮಹಾಮಂಡಳಿಯ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಉಡುಪಿ ಜಿಲ್ಲಾ ಅಮೆಚೂರು ಅಥ್ಲೆಟಿಕ್ ಅಸೋಸಿಯೇಷನ್ ಗೌರವಾಧ್ಯಕ್ಷ ಬಾಲಕೃಷ್ಣ ಹೆಗ್ಡೆ, ಉಡುಪಿ ಜಿಲ್ಲಾ ಅಮೆಚೂರು ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಕೆಂಪರಾಜ್ ಎಚ್. ಬಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಕಿಶೋರ್‌ಕುಮಾರ್ ಸಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಜಿ ಶಂಕರ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಭಾಸ್ಕರ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಕ ಪ್ರಶಾಂತ್ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.