ಮೂಡಬಿದಿರೆ: ಸಮೀಪದ ಕಾಂತಾವರ ಕ್ರಾಸ್‌ನಲ್ಲಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಯು-ಟರ್ನ್ ತಾತ್ಕಾಲಿಕವಾಗಿ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಏಕಾಏಕಿ ಬದಲಾವಣೆ ಉಂಟಾಗಿ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು. ವಿಶೇಷವಾಗಿ ಕಾಂತಾವರದಿಂದ ಬೆಳುವಾಯಿ ಕಡೆಗೆ ಸಾಗುವ ವಾಹನ ಸವಾರರು ಈಗ ಚಿಲಿಂಬಿವರೆಗೆ ತೆರಳಿ ಯು-ಟರ್ನ್ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ.
ಸ್ಥಳೀಯ ನಿವಾಸಿಗಳು ಮತ್ತು ವಾಹನ ಸವಾರರು ರಸ್ತೆ ತಡೆ ಹಾಗೂ ಸಂಚಾರ ಬದಲಾವಣೆಯ ಬಗ್ಗೆ ಪೂರ್ವ ಸೂಚನೆ ಮತ್ತು ಸಮರ್ಪಕ ಟ್ರಾಫಿಕ್ ವ್ಯವಸ್ಥೆ ಇರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಹಠಾತ್ ರಸ್ತೆ ಮುಚ್ಚುವುದರಿಂದ ಅಪಘಾತಗಳ ಪ್ರಮಾಣ ಹೆಚ್ಚುತ್ತಿದೆ” ಎಂದು ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ.
ಪೊಲೀಸರು ಹಾಗೂ ಸಂಬಂಧಿತ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಮಾಹಿತಿ ಲಭ್ಯವಾಗಿದೆ.

















