ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಒಬ್ಬ ವ್ಯಕ್ತಿಗೆ ಒಂದೇ ಟಿಕೆಟ್ ಸಿಗಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಡಿಕೆ ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ.
ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಸ್ಪರ್ಧಿಸಲು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್ ಸಿಗುತ್ತದೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದ್ದು, ಇಲ್ಲಿ ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಲ್ಲ. ಪಕ್ಷ ಅಧಿಕಾರಕ್ಕೆ ಬರಬೇಕು, ಅದು ಆದಾಗ ಎಲ್ಲರಿಗೂ ಅಧಿಕಾರ ಸಿಗುತ್ತದೆ.ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಒಂದೇ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಂದೇಶ ರವಾನಿಸಲಾಗಿದೆ ಎಂದಿದ್ದಾರೆ.
ಪ್ರತಿಯೊಬ್ಬರಿಗೂ ಅವರದೇ ಆದ ಶಕ್ತಿ ಮತ್ತು ಪ್ರಾಮುಖ್ಯತೆ ಇರುತ್ತದೆ. ಒಬ್ಬ ವ್ಯಕ್ತಿ 100 ಬೂತ್ಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದ್ದಾನೆ, ಇನ್ನೊಬ್ಬರು 50 ಅಥವಾ 10 ಅನ್ನು ನಿಭಾಯಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಯಾರಿಗೆ ಯಾವ ಅಧಿಕಾರ ಸಿಗುತ್ತದೆ ಎಂದು ನಾನು ಹೇಳಲಾರೆ ಎಂದು ಅವರು ಹೇಳಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ 2018ರ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರೂ ಬಾದಾಮಿಯಿಂದ ಗೆದ್ದಿದ್ದರು. ಸಿದ್ದರಾಮಯ್ಯ ಈ ಬಾರಿ ಕ್ಷೇತ್ರದ ಹುಡುಕಾಟದಲ್ಲಿದ್ದು, ಮತ್ತೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನಿಂದ ಒಬ್ಬ ವ್ಯಕ್ತಿಗೆ ಒಂದು ಕ್ಷೇತ್ರದಿಂದ ಸ್ಪರ್ಧಿಸಲು ಒಂದು ಟಿಕೆಟ್ ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.