ಉಡುಪಿ: ಉಡುಪಿ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಮೇ 16ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದ ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಲತಾಯಿ ಧೋರಣೆ ತೋರಿ ಜಿಲ್ಲೆಯ ಜನರಿಗೆ ಅನ್ಯಾಯ ಮಾಡುತ್ತಿದೆ. 2013ರಲ್ಲಿ ಉಡುಪಿ ನಗರ ಭಾಗಕ್ಕೆ ಆರಂಭಗೊಂಡ ನರ್ಮ ಬಸ್ ಯೋಜನೆಯಲ್ಲಿ 40 ಕ್ಕೂ ಹೆಚ್ಚು ಬಸ್ಸುಗಳು ಇದ್ದು, ಇಂದು ಸರ್ಕಾರ ಗ್ಯಾರಂಟಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿ ಶೇ. 50ರಷ್ಟು ಬಸ್ ಗಳನ್ನು ಕಡಿತಗೊಳಿಸಿದೆ.
ಉಡುಪಿ ಜಿಲ್ಲಾ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸದೆ ಜಿಲ್ಲೆಯ ಬಡ ರೋಗಿಗಳ ಜೀವದೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಆಟವಾಡುತ್ತಿದೆ. ಉಡುಪಿಯ ಪರ್ಯಾಯಕ್ಕೆ ಅನುದಾನ ನೀಡುವ ಭರವಸೆಯನ್ನು ನೀಡಿ ನಂತರ ಬಿಡಿಗಾಸು ನೀಡದೆ ಹಿಂದೂ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ದೂರಿದರು.
ಕಂದಾಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಭೂಮಾಪಕರ ಬಹುಕಾಲದ ಬೇಡಿಕೆಯನ್ನು ಈಡೇರಿಸದೆ ಸತತ ಎರಡು ತಿಂಗಳುಗಳಿಂದ ಭೂಮಾಪಕರು ಮುಷ್ಕರ ನಡೆಸುತ್ತಿದ್ದು, ಜನರಿಗೆ ಅನ್ಯಾಯವಾಗುತ್ತಿದ್ದರೂ ಜಾಣ ಕುರುಡುತನ ಪ್ರದರ್ಶಿಸುತ್ತಿ ದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಯುವಮೋರ್ಚಾದ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ ಉಪಸ್ಥಿತರಿದ್ದರು.

















