ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ವ್ಯಯಿಸುತ್ತಿದೆ. ರಾಜ್ಯದ ಬರ ಪರಿಸ್ಥಿತಿಗೆ ಸ್ಪಂದಿಸದೇ ಇರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್ ಶಾಸಕರು ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
ದೆಹಲಿಯಲ್ಲಿ ಸಿದ್ದರಾಮಯ್ಯ ಸರ್ಕಾರ ಪ್ರತಿಭಟನೆ ಶುರುಮಾಡುವ 11 ಗಂಟೆ ಹೊತ್ತಿಗೆ ಬೆಂಗಳೂರಿನಲ್ಲಿ ವಿಧಾನಸೌಧದ ಆವರಣದಲ್ಲಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ ನಡೆಯಲಿದೆ.
“ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222 ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದರೂ, ಈವರೆಗೂ ಕುಡಿಯುವ ನೀರಿನ ಸಮಸ್ಯೆಯೂ ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮ ಕೈಗೊಳ್ಳದಿರುವ ಕುರಿತು ಪಕ್ಷದ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಫೆಬ್ರವರಿ 7 ರ ಬುಧವಾರ ನಾಳೆ ಬೆಳಗ್ಗೆ 11 ಗಂಟೆಗೆ, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುವುದು” ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ ವಿಜಯೇಂದ್ರ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.