ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಭೂ ಸುಧಾರಣೆ ಕಾಯ್ದೆ, ಕಾರ್ಮಿಕರ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗಳಿಗೆ ರಾಜ್ಯ ಬಿಜೆಪಿ ಸರ್ಕಾರ‌ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ‘ಜನಧ್ವನಿ ಅಭಿಯಾನ’ದ ಮೂಲಕ ಇಂದು ಕಾಂಗ್ರೆಸ್ ಕಾರ್ಯಕರ್ತರು ಉಡುಪಿ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಿದರು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರವು ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ಗೊಳಿಸಿದೆ. ಆ ಮೂಲಕ ರೈತರು ಹಾಗೂ ಕಾರ್ಮಿಕ ಹಕ್ಕುಗಳನ್ನು ಕಸಿದುಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಕೋವಿಡ್-19 ಉಪಕರಣಗಳ ಖರೀದಿಯಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆಸಿದೆ. ಪ್ರವಾಹ ಸಂತ್ರಸ್ತರಿಗೆ ಪರಿಹಾರ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
ಬಳಿಕ ಕಾಂಗ್ರೆಸ್ ಭವನದಿಂದ ತಾಲೂಕು ಕಚೇರಿಯ ವರೆಗೆ ಮೆರೆವಣಿಗೆಯ ಮೂಲಕ ತೆರಳಿದ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಯು.ಆರ್. ಸಭಾಪತಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ನಗರಸಭಾ ಸದಸ್ಯ ರಮೇಶ್ ಕಾಂಚನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹರೀಶ್ ಕಿಣಿ, ಕಾಂಗ್ರೆಸ್ ನಾಯಕರಾದ ವೆರೋನಿಕಾ ಕರ್ನೆಲಿಯೋ, ಯತೀಶ್ ಕರ್ಕೆರಾ, ಜನಾರ್ಧನ ಭಂಡಾರ್ಕರ್, ಡಾ. ಸುನೀತಾ ಶೆಟ್ಟಿ, ರೋಶನಿ ಒಲಿವರ್, ಹಬೀಬ್ ಆಲಿ, ಪ್ರಶಾಂತ್ ಪೂಜಾರಿ, ಭಾಸ್ಕರ್ ರಾವ್ ಕಿದಿಯೂರು, ನರಸಿಂಹ ಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.