ಜನಸಾಮಾನ್ಯರಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿದ್ದು, ಜನಸಾಮಾನ್ಯರಲ್ಲಿ ರೋಗಗಳ ಹರಡುವುದು, ಅವುಗಳ ನಿಯಂತ್ರಣದ ಬಗ್ಗೆ ಮುಂಜಾಗ್ರತೆ ತೆಗೆದುಕೊಳ್ಳುವ ಬಗ್ಗೆ, ಆರೋಗ್ಯ ಶಿಕ್ಷಣವನ್ನು ನೀಡಿ ಎಚ್ಚರದಿಂದಿರಲು ಹೆಚ್ಚು ಹೆಚ್ಚು ಅರಿವು ಮೂಡಿಸುವ ಕಾರ್ಯಗಳನ್ನು ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡೆಂಗ್ಯೂ / ಮಲೇರಿಯಾ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಮುಂಗಾರು ಮಳೆ ಈಗಾಗಲೇ ಜಿಲ್ಲೆಯಲ್ಲಿ ಪ್ರಾರಂಭಗೊoಡಿದೆ. ಮಳೆಯ ನೀರು ಎಲ್ಲೆಂದರಲ್ಲಿ ನಿಂತು ಸೊಳ್ಳೆಗಳ ಸಂತಾನೋತ್ಪತಿ ವೃದ್ಧಿಗೊಂಡು, ಮಲೇರಿಯಾ, ಚಿಕನ್‌ಗೂನ್ಯಾ, ಡೆಂಗ್ಯೂ, ಫೈಲೇರಿಯಾ ಸೇರಿದಂತೆ ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿವೆ.

ಸಾರ್ವನಿಕರಿಗೆ ಇವುಗಳ ತಡೆಗಟ್ಟುವ ಕುರಿತು ಆರೋಗ್ಯ ಶಿಕ್ಷಣದ ಬಗ್ಗೆ ಅರಿವು ಮೂಡಿಸಿ, ರೋಗಗಳು ಹರಡದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತಿಗಳು ಕಾರ್ಯಪ್ರವೃತ್ತರಾಗುವುದರೊಂದಿಗೆ ಸಮುದಾಯದ ಸಹಭಾಗಿತ್ವದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದರು.

ಜನಸಾಮಾನ್ಯರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿಟ್ಟುಕೊಂಡಾಗ ಮಾತ್ರ ಉತ್ತಮ ಆರೋಗ್ಯ ಹೊಂದಲು ಸಾಧ್ಯ. ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಆಗುವಂತೆ ಸ್ಥಳೀಯ ಸಂಸ್ಥೆಗಳೊoದಿಗೆ ಸಹಕರಿಸಬೇಕು. ಕಸವನ್ನು ಎಲ್ಲೆಂದರಲ್ಲಿ ಎಸೆದಲ್ಲಿ ರೋಗ ರುಜಿನಗಳು ಹರಡಲು ಕಾರಣವಾಗುತ್ತದೆ. ಇದಕ್ಕೆ ಆಸ್ಪದ ನೀಡಬಾರದು. ಸ್ವಚ್ಛ ಪರಿಸರವನ್ನು ಇಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. ಸರಕಾರ ಈ ಬಗ್ಗೆ ನೋಡಿಕೊಳ್ಳುತ್ತದೆ ಎಂದು ಉದಾಸೀನತೆ ಮಾಡಬಾರದು ಎಂದರು.

ಸಾಮಾನ್ಯವಾಗಿ ಮುಂಗಾರಿನಲ್ಲಿ ಮಳೆಯು ಬಿಟ್ಟು ಬಿಟ್ಟು ಬಂದoತಹ ಸಂದರ್ಭದಲ್ಲಿ ಮನೆ ಹಾಗೂ ಕಟ್ಟಡಗಳ ಸುತ್ತಮುತ್ತಲಿನ ಹೊರಾಂಗಣದಲ್ಲಿ ಘನತ್ಯಾಜ್ಯ ಅನುಪಯುಕ್ತ ವಸ್ತುಗಳಲ್ಲಿ ಟೈರುಗಳಲ್ಲಿ, ಎಳನೀರಿನ ಚಿಪ್ಪು ಸೇರಿದಂತೆ ಮತ್ತಿತರ ಸ್ಥಳಗಳಲ್ಲಿ ನೀರು ಶೇಖರಣೆಗೊಂಡು ಆ ಸ್ಥಳಗಳಲ್ಲಿ ಲಾರ್ವಾಗಳು ಉತ್ಪತ್ತಿಯಾಗಿತ್ತವೆ. ಸೊಳ್ಳೆಗಳ ತಾಣಗಳ ನಿರ್ಮೂಲನೆಗೆ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಮುಂದಾಗಬೇಕು. ಹೋಟೆಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಒಂದೊಮ್ಮೆ ಇವುಗಳನ್ನು ಉಲ್ಲಂಘಿಸಿದ್ದಲ್ಲಿ ಸ್ಥಳೀಯ ಸಂಸ್ಥೆಗಳು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಡೆಂಗ್ಯೂ, ಚಿಕೂನ್‌ಗೂನ್ಯಾ, ಮಲೇರಿಯಾ ರೋಗಗಳು ನಗರ ಪ್ರದೇಶಗಳಲ್ಲಿಯೇ ಹೆಚ್ಚಾಗಿ ಕಳೆದ ನಾಲ್ಕೈದು ವರ್ಷಗಳಿಂದ ಕಂಡು ಬರುತ್ತಿದೆ. ನಗರಸಭೆ ಮತ್ತು ಸ್ಥಳೀಯ ಸಂಸ್ಥೆಗಳು ಮಳೆಗಾಲದಲ್ಲಿ ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ನೋಡಿಕೊಳ್ಳಬೇಕು. ಸ್ವಯಂ ಸೇವಕರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರನ್ನು ಒಳಗೊಂಡ ತಂಡಗಳು ಮನೆ ಮನೆಗೆ ಭೇಟಿ ನೀಡಿ, ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳನ್ನು ನಿರ್ಮೂಲನೆಗೊಳಿಸುವುದರೊಂದಿಗೆ, ಸಾಂಕ್ರಾಮಿಕ ರೋಗಗಳು ಹರಡದಂತೆ ಅರಿವು ಮೂಡಿಸುವ ಕಾರ್ಯಗಳನ್ನು ಮಾಡಬೇಕೆಂದರು.

ಜಿಲ್ಲೆಯಲ್ಲಿ ಉದ್ಯೋಗವನ್ನು ಅರಸಿ ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಕಾರ್ಮಿಕರುಗಳು ಆಗಮಿಸುತ್ತಾರೆ. ಅವರಿದಂಲೂ ಸಹ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ಇದ್ದು, ನಿಯಂತ್ರಣಕ್ಕೆ ಕಟ್ಟಡ ನಿರ್ಮಾಣ ಸಂಸ್ಥೆಗಳು ಹಾಗೂ ಕಾರ್ಮಿಕ ಗುತ್ತಿಗೆದಾರರ ಸಭೆಯನ್ನು ನಗರಸಭೆಯ ಆಯುಕ್ತರು ಕರೆದು ಅವರಿಗೂ ಸಹ ಇವುಗಳ ನಿಯಂತ್ರಣಕ್ಕೆ ಕೈಗೊಳ್ಳಬಹುದಾದದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು. ಜೊತೆಗೆ ಕಾರ್ಮಿಕರ ಆರೋಗ್ಯ ತಪಾಸಣೆಗೂ ಒತ್ತು ನೀಡಬೇಕು ಎಂದರು.

ಜಿಲ್ಲೆಯ ಬಂದರು ಪ್ರದೇಶಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಮೀನುಗಾರಿಕೆ ಚಟುವಟಿಕೆಗೆ ನಿರ್ಬಂಧ ಇರುವ ಹಿನ್ನೆಲೆಯಲ್ಲಿ ಬೋಟುಗಳ ನಿಲುಗಡೆಯಾಗಿದ್ದು, ಅಲ್ಲಿನ ಟ್ಯಾಂಕ್‌ಗಳು ಹಾಗೂ ಬದಿಯಲ್ಲಿ ಅಳವಡಿಸಿರುವ ಟೈರುಗಳಲ್ಲಿ ಮಳೆಯ ನೀರು ನಿಂತು ಸೊಳ್ಳೆಗಳ ಸಂತಾನೋತ್ಪತ್ತಿಗೆ ತಾಣವಾಗುತ್ತದೆ. ಹೀಗಾಗದಂತೆ ಎಚ್ಚರವಹಿಸಬೇಕು ಎಂದು ಮೀನುಗಾರಿಕೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತೋಟಗಾರಿಕೆ ಬೆಳೆಗಳಾದ ಅಡಿಕೆಯ ಹಾಳೆಗಳು, ಅನಾನಸ್‌ನ ಎಲೆಗಳ ಸಂಧಿಗಳಲ್ಲಿ ಹಾಗೂ ರಬ್ಬರ್ ಸಂಗ್ರಹದ ಟಬ್‌ಗಳಲ್ಲಿಯೂ ಸಹ ಮಳೆಯ ನೀರು ನಿಂತು ಸೊಳ್ಳೆಗಳ ಉತ್ಪತ್ತಿಗೆ ಅನುಕೂಲಕರವಾಗಿರುತ್ತದೆ. ಈ ಬಗ್ಗೆಯೂ ಸಹ ಎಚ್ಚರವಹಿಸುವಂತೆ ರೈತರಲ್ಲಿ ಅರಿವು ಮೂಡಿಸಬೇಕು ಎಂದರು.

ಜಿಲ್ಲೆಯ ಎಲ್ಲಾ ವಿದ್ಯಾರ್ಥಿನಿಲಯ, ಶಾಲಾ-ಕಾಲೇಜು, ಅಂಗನವಾಡಿ, ಸೇರಿದಂತೆ ಮತ್ತಿತರ ಸ್ಥಳಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಗಿಂದಾಗ್ಗೆ ಕೈಗೊಳ್ಳಬೇಕು ಎಂದ ಅವರು, ಕಲ್ಲು ಕ್ವಾರಿಗಳಲ್ಲಿ ನೀರುಗಳು ನಿಲ್ಲದಂತೆ ಎಚ್ಚರ ವಹಿಸಬೇಕು. ಚಿಕ್ಕ ಚಿಕ್ಕ ತಾತ್ಕಾಲಿಕ ಕ್ವಾರಿಗಳಲ್ಲಿ ಲಾರ್ವಿಸೈಡ್ ಸಿಂಪಡಿಸಿ, ಲಾರ್ವಾ ಉತ್ಪತ್ತಿಯಾಗದಂತೆ ಕ್ರಮವಹಿಸಬೇಕೆಂದರು.

ಗ್ರಾಮೀಣ ಭಾಗದ ಪ್ರತೀ ಪಂಚಾಯತ್ ನಲ್ಲಿಯೂ ಸಹ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿಗಳ ಸಭೆಯನ್ನು ಕರೆದು ಸಾಂಕ್ರಾಮಿಕ ರೋಗಗಳ ಹರಡುವಿಕೆಯ ತಡೆಗೆ ಕ್ರಮವಹಿಸಬೇಕು. ಸ್ಥಳೀಯ ಸಂಸ್ಥೆಗಳು ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಮಗಳ ಉಲ್ಲಂಘನೆ ಮಾಡಿದ್ದಲ್ಲಿ ಅಂತಹವರ ವಿರುದ್ಧ ದಂಡ ವಿಧಿಸಬೇಕು ಎಂದರು. ಸಭೆಯಲ್ಲಿ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ ಹಾಗೂ ಮತ್ತಿತರರು ಉಪಸ್ಥಿತರಿದ್ದರು.