ಮಂಗಳೂರು/ಉಡುಪಿ: ಸೌಜನ್ಯ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗವು ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನಿಯೋಗವು ಮನವಿ ಸಲ್ಲಿಸಿರುವುದರಿಂದ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಶಾಸಕಾರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಭಾಗೀರತಿ, ಭರತ್ ಶೆಟ್ಟಿ, ಸುನಿಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.