ಮಂಗಳೂರು: ಡಿಸೆಂಬರ್ 6 ರಂದು ಬಾಬರಿ ಮಸೀದಿ ಕೆಡವಿದ ದಿನದ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು ಕರಾಳ ದಿನ ಆಚರಿಸುವ ಹಾಗೂ ಹಿಂದೂ ಸಂಘಟನೆಗಳು ವಿಜಯೋತ್ಸವ ಆಚರಿಸುವ ಸಾಧ್ಯತೆಗಳಿದ್ದು, ಇದರಿಂದ ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟಾಗುವ ಸಾಧ್ಯತೆ ಇರುತ್ತದೆ.
ಆದ್ದರಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ಸಂಪೂರ್ಣ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಹರ್ಷ. ಪಿ.ಎಸ್ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿರ್ಬಂಧನಾ ಆಜ್ಞೆಯನ್ನು ವಿಧಿಸಿ ಆದೇಶಿಸಿದ್ದಾರೆ.
ನಿರ್ಬಂಧಕಾಜ್ಞೆ ಜಾರಿಯಲ್ಲಿರುವ ಸಮಯದಲ್ಲಿ ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳು ಅಥವಾ ಲಾಠಿಗಳನ್ನು, ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು, ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದು, ಮುಂತಾದವುಗಳನ್ನು ನಿಷೇಧಿಸಿದೆ.
ಈ ನಿರ್ಬಂಧಕಾಜ್ಞೆಯು ಮಂಗಳೂರು ನಗರ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದ್ದು, ಈ ನಿರ್ಬಂಧಕಾಜ್ಞೆಯ ಜಾರಿಯಲ್ಲಿರುವ ಪ್ರದೇಶದಲ್ಲಿ ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಎಂದು ತಿಳಿಸಿದ್ದಾರೆ