ಅಬಕಾರಿ ನೀತಿ ಹಗರಣ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಜಾರಿ ನಿರ್ದೇಶನಾಲಯ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.

ಕಾರ್ಯ ನಿರ್ವಹಿಸುತ್ತಿರುವಾಲೇ ಬಂಧನಕ್ಕೊಳಗಾದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂಗೆ ರಕ್ಷಣೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು. ಕಳೆದ ಕೆಲವು ದಿನಗಳಿಂದ ಜಾರಿನಿರ್ದೇಶನಾಲಯವು ಬರೋಬ್ಬರಿ 9 ಸಮನ್ಸ್ ನೀಡಿದ್ದರೂ ಅರವಿಂದ್ ಕೇಜ್ರಿವಾಲ್ ವಿಚಾರಣೆ ಹಾಜರಾಗದೆ ತಪ್ಪಿಸಿಕೊಂಡಿದ್ದರು. ಗುರುವಾರ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ತನಿಖೆ ನಡೆಸಿ ಹೆಚ್ಚಿನ ವಿಚಾರಣೆಗಾಗಿ ಅವರನ್ನು ಬಂಧಿಸಿದ್ದಾರೆ.

ಇಡಿ ಬಂಧನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು ಇಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಏತನ್ಮಧ್ಯೆ, ಪಕ್ಷದ ಕಾರ್ಯಕರ್ತರು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.