ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ಹಸ್ತಾಂತರಿಸಿರುವ ರಾಜ್ಯ ಸರಕಾರದ ನಿಲುವು ಉತ್ತಮವಾಗಿದೆ ಎಂದು ಕ್ಷೇತ್ರ ಧರ್ಮಸ್ಥಳದ ವಕ್ತಾರರಾದ ಕೆ. ಪಾರ್ಶ್ವನಾಥ್ ಜೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಈ ವಿಚಾರ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕ ವಾರ್ತೆಗಳು, ಊಹಾ ಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿವೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.) ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ. ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ “ಸತ್ಯ” ಆದ್ದರಿಂದ, ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.












