ಬೆಳ್ತಂಗಡಿ: ಧರ್ಮಸ್ಥಳ ತಲೆಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಸಮೀಪ ನಡೆದಿದೆ.
ಎಸ್ಐಟಿ ಎಸ್ಪಿ ಸಿ.ಎ. ಸೈಮನ್ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಎಸ್ಪಿ ಸೇರಿದಂತೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಕಾರಿನಲ್ಲಿ ಎಸ್ಪಿ ಸಿ.ಎ. ಸೈಮನ್, ಇನ್ಸ್ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಸಿಬ್ಬಂದಿಯೊಬ್ಬರು ಪ್ರಯಾಣಿಸುತ್ತಿದ್ದರು. ಧರ್ಮಸ್ಥಳ ತಲೆಬುರುಡೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎಸ್ಐಟಿ ತಂಡವು ತನಿಖಾಧಿಕಾರಿಯಾಗಿರುವ ಚಿಕ್ಕಮಗಳೂರು ಎಸ್ಪಿ ಜೀತೇಂದ್ರ ದಯಾಮ ಅವರನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಚಾರ್ಮಾಡಿ ಸಮೀಪ ಸಾಗುತ್ತಿದ್ದ ಇನ್ನೋವಾ ಕಾರು ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಪಲ್ಟಿಯಾಗಿದೆ. ಸ್ಥಳೀಯರು ಹಾಗೂ ಅಧಿಕಾರಿಗಳ ಸಹಾಯದಿಂದ ಗಾಯಾಳುಗಳನ್ನು ಸುರಕ್ಷಿತವಾಗಿ ಹೊರತೆಗೆದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಅಪಘಾತದಲ್ಲಿ ಎಸ್ಪಿ ಸೈಮನ್, ಇನ್ಸ್ಪೆಕ್ಟರ್ ಕುಸುಮಾಧರ್, ಕಾರು ಚಾಲಕ ಹಾಗೂ ಸಿಬ್ಬಂದಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಧರ್ಮಸ್ಥಳ ತಲೆಬುರುಡೆ ಪ್ರಕರಣದ ತನಿಖೆ ತೀವ್ರಗೊಂಡಿರುವ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳ ವಾಹನ ಅಪಘಾತಕ್ಕೀಡಾಗಿರುವುದು ಗಮನ ಸೆಳೆದಿದ್ದು, ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

















