ಉಡುಪಿ: ರಾಜ್ಯ ಬಿಜೆಪಿ ಸರ್ಕಾರ ಕೊರೊನಾ ನಿರ್ವಹಣಾ ಪರಿಕರಗಳ ಖರೀದಿಯಲ್ಲಿ ದೊಡ್ಡಮಟ್ಟದಲ್ಲಿ ಲೂಟಿ ಮಾಡಿದ್ದು, ವೆಂಟಿಲೇಟರ್, ಪಿಪಿ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಸರ್ ಖರೀದಿಯಲ್ಲಿ ಸರ್ಕಾರ ಶೇ. 50ರಷ್ಟು ಭ್ರಷ್ಟಾಚಾರ ಎಸಗಿದೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಆರೋಪಿಸಿದರು.
ಉಡುಪಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ವಿರೋಧ ಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಕ್ತ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಆದರೆ ಸಚಿವರು ಇದಕ್ಕೆ ಸೂಕ್ತ ಉತ್ತರ ನೀಡದೆ ಪಲಾಯನ ಮಾಡುತ್ತಿದ್ದಾರೆ. ಮಾಧ್ಯಮಗಳಿಗೆ ಸುಳ್ಳು ಹೇಳಿಕೆಯನ್ನು ನೀಡಿ ಹಗರಣವನ್ನು ಮುಚ್ಚಿಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ನ್ಯಾಯಾಂಗ ತನಿಖೆಗೆ ಒಪ್ಪಿಸಿ ಕೊರೊನಾ ಪರಿಕರಗಳ ಖರೀದಿ ಹಗರಣವನ್ನು ನಿವೃತ್ತ ನ್ಯಾಯಾಧೀಶರ ಮೂಲಕ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ಆ ಮೂಲಕ ಕೊರೊನಾ ನಿರ್ವಹಣಾ ಪರಿಕರಗಳ ಸತ್ಯಾಸತ್ಯತೆಯನ್ನು ಜನರ ಮುಂದೆ ಇಡಬೇಕು ಎಂದು ಒತ್ತಾಯಿಸಿದರು.
ಕೊರೊನಾ ನಿರ್ವಹಣೆಯಲ್ಲಿ ಸಚಿವರ ಮಧ್ಯೆ ಸಮನ್ವಯತೆಯ ಕೊರತೆಯಿದೆ. ಯಾರು ಜವಾಬ್ದಾರಿ ವಹಿಸಿಕೊಳ್ಳಬೇಕು ಎನ್ನುವ ಗೊಂದಲದಲ್ಲಿ ಇದ್ದಾರೆ. ಕೊರೊನಾ ತಡೆಗಟ್ಟಲು ಕ್ರಮ ಕೈಗೊಳ್ಳುವ ಬದಲು ಯಾವ ರೀತಿ ಹಣ ಮಾಡಬಹುದು ಎನ್ನುವುದರ ಬಗ್ಗೆ ಯೋಚನೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಕೊರೊನಾ ನಿರ್ವಹಣೆಗೆ ‘ಆರೋಗ್ಯ ಹಸ್ತ’
ಕೊರೊನಾ ನಿರ್ವಹಣೆಗೆ ಕಾಂಗ್ರೆಸ್ ಪಕ್ಷವು ‘ಆರೋಗ್ಯ ಹಸ್ತ’ ಎಂಬ ಕಾರ್ಯಕ್ರಮವನ್ನು ಜಾರಿಗೊಳಿಸುತ್ತಿದೆ. ಇದರ ಮೂಲಕ ಸ್ವಯಂ ಸೇವಕ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕೊರೊನಾ ಬಗ್ಗೆ ಮಾಹಿತಿ, ಜಾಗೃತಿ ಮೂಡಿಸುವುದು. ಕೊರೊನಾ ಲಕ್ಷಣ ಇರುವಂತ ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡುತ್ತಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಜಯಮಾಲ, ಮಾಜಿ ಶಾಸಕ ಯು.ಆರ್. ಸಭಾಪತಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಜಿ.ಎ. ಬಾವಾ, ಹರೀಶ್ ಕಿಣಿ, ಗೀತಾ ವಾಗ್ಲೆ, ಮುರಳಿ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ದಿನೇಶ್ ಪುತ್ರನ್ ಮೊದಲಾದವರು ಇದ್ದರು.












