ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ್ದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ–ಆಗಮಿಕರ ಮತ್ತು ಉಪಾದಿವಂತರ ಒಕ್ಕೂಟದ ಸದಸ್ಯರು ಈ ಬಗ್ಗೆ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಧಾರ್ಮಿಕ ದತ್ತಿ ಇಲಾಖೆ ಬುಧವಾರ ಈ ಸಂಬಂಧ ಸುತ್ತೋಲೆಯೊಂದನ್ನು ಹೊರಡಿಸಿದೆ.
ಹಿರಿಯ ನಾಗರಿಕರಿಗೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟವಾಗುತ್ತಿದ್ದು, ತಮ್ಮ ವಯಸ್ಸಿನ ದಾಖಲೆ ಅಥವಾ ಆಧಾರ್ ಕಾರ್ಡ್ ಅನ್ನು ತೋರಿಸಿದಲ್ಲಿ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಹಾಗೂ ಸ್ಥಳಾವಕಾಶ ಇದ್ದಲ್ಲಿ ಪ್ರತ್ಯೇಕ ಸ್ಥಳ ಕಾಯ್ದಿರಿಸಲಾಗುವುದು ಎಂದು ತಿಳಿಸಲಾಗಿದೆ. ದೇವಾಲಯಗಳಲ್ಲಿ ಹಿರಿಯ ನಾಗರಿಕರಿಗಾಗಿ ಸಹಾಯ ಕೇಂದ್ರವನ್ನು ಸ್ಥಾಪಿಸಿ, ಜವಾಬ್ದಾರಿಯುತ ಸಿಬ್ಬಂದಿಯನ್ನು ನಿಯೋಜಿಸಿ ದೇವರ ದರ್ಶನದ ವ್ಯವಸ್ಥೆ ಮಾಡಬೇಕು ಎಂದೂ ಸುತ್ತೋಲೆ ಹೇಳಿದೆ.
ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿ ಬರುವ ಕುಕ್ಕೆ ಸುಬ್ರಹ್ಮಣ್ಯ, ಮೈಸೂರಿನ ಚಾಮುಂಡಿ ಬೆಟ್ಟ, ಶಿವಮೊಗ್ಗದ ಸಿಗಂದೂರು ಚೌಡೇಶ್ವರಿ ದೇವಸ್ಥಾನ, ಕೊಲ್ಲೂರು ಮೂಕಾಂಬಿಕೆ, ನಂಗನಗೂಡು ಶ್ರೀಕಂಠೇಶ್ವರ, ಘಾಟಿ ಸುಬ್ರಹ್ಮಣ್ಯ, ಶಿರಸಿ ಮಾರಿಕಾಂಬಾ, ಯಡಿಯೂರು ಸಿದ್ದಲಿಂಗೇಷವರ ಸೇರಿದಂತೆ ನಾಡಿನ ಎಲ್ಲಾ ಪ್ರಮುಖ ದೇವಸ್ಥಾನಗಳಲ್ಲಿ ವಯೋವೃದ್ದರಿಗೆ ನೇರ ದರ್ಶನ ವ್ಯವಸ್ಥೆ ಸಿಗಲಿದೆ.