ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಶೋಷಿತರು, ದಲಿತರು ಹಾಗೂ ಬಡವರ ಕಲ್ಯಾಣದತ್ತ ಚಿತ್ತ ಹರಿಸಿ, ಪರಿಶಿಷ್ಟ ಜಾತಿ ಮೀಸಲಾತಿಯನ್ನು 15% ದಿಂದ 17%ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 3% ದಿಂದ 7%ಕ್ಕೆ ಏರಿಸುವ ನಿಟ್ಟಿನಲ್ಲಿ ತೆಗೆದುಕೊಂಡ ಐತಿಹಾಸಿಕ ನಿರ್ಧಾರವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸುತ್ತದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಸ್.ಸಿ. ಮತ್ತು ಎಸ್.ಟಿ. ಸಮುದಾಯದ ಮುಖಂಡರು ಅ.17 ರಂದು ಬೃಹತ್ ಸಂಖ್ಯೆಯಲ್ಲಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪ್ರಮುಖರು ಹಾಗೂ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಮತ್ತು ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಎಸ್.ಸಿ. ಮತ್ತು ಎಸ್.ಟಿ. ಸಮುದಾಯಗಳ ಕಲ್ಯಾಣದ ವಿವಿಧ ಯೋಜನೆಗಳ ಅನುದಾನ ಮತ್ತು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿರುವ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸುವ ನೆಲೆಯಲ್ಲಿ ಅ.22ರಂದು ಉಡುಪಿಯಲ್ಲಿ ಜಿಲ್ಲಾ ಬಿಜೆಪಿ, ಜಿಲ್ಲಾ ಎಸ್.ಸಿ. ಮೋರ್ಚಾ ಮತ್ತು ಜಿಲ್ಲಾ ಎಸ್.ಟಿ. ಮೋರ್ಚಾ ನೇತೃತ್ವದಲ್ಲಿ ‘ಬೃಹತ್ ಎಸ್.ಸಿ., ಎಸ್.ಟಿ. ಸಮುದಾಯಗಳ ಸಮಾವೇಶ’ ನಡೆಯಲಿದೆ ಎಂದು ಅವರು ಹೇಳಿದರು.
ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ರಾಮುಲು ಸಾರಥ್ಯದಲ್ಲಿ ನಡೆಯಲಿರುವ ‘ಬೃಹತ್ ಎಸ್.ಸಿ., ಎಸ್.ಟಿ. ಸಮಾವೇಶ’ದಲ್ಲಿ 2,000ಕ್ಕೂ ಮಿಕ್ಕಿ ಎಸ್.ಸಿ., ಎಸ್.ಟಿ. ಸಮುದಾಯದ ಬಂಧುಗಳು ಪಾಲ್ಗೊಳ್ಳಲಿದ್ದು, ಮೀನುಗಾರಿಕೆ, ಬಂದರು, ಒಳನಾಡ ಜಲಸಾರಿಗೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹಾಗೂ ಜಿಲ್ಲೆಯ ಶಾಸಕರು ಮತ್ತು ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.
ಜಿಲ್ಲೆಯಾದ್ಯಂತ ಪಕ್ಷದ ಸಂಘಟನಾತ್ಮಕ ಕೆಲಸ ಕಾರ್ಯಗಳು ವೇಗ ಪಡೆದುಕೊಂಡಿದೆ. ಬೂತ್ ಸಶಸ್ತೀಕರಣ ಅಭಿಯಾನದ ಅಂಗವಾಗಿ ಈಗಾಗಲೇ ಬೈಂದೂರು ಮಂಡಲದ ಎಲ್ಲಾ ಶಕ್ತಿಕೇಂದ್ರಗಳ ಸಭೆಯು ಯಶಸ್ವಿಯಾಗಿ ನಡೆದಿದ್ದು, ಕುಂದಾಪುರ ಮಂಡಲದ ಶಕ್ತಿಕೇಂದ್ರಗಳ ಸಭೆಗಳು ಪ್ರಗತಿಯಲ್ಲಿವೆ. ಕಾಪು, ಕಾರ್ಕಳ, ಉಡುಪಿ ನಗರ ಮತ್ತು ಉಡುಪಿ ಗ್ರಾಮಾಂತರ ಮಂಡಲಗಳ ಶಕ್ತಿಕೇಂದ್ರಗಳ ಸಭೆಯು ಸದ್ಯದಲ್ಲೇ ಯೋಜನಾಬದ್ಧವಾಗಿ ನಡೆಯಲಿದ್ದು, ಬಳಿಕ ಜಿಲ್ಲೆಯಾದ್ಯಂತ ಎಲ್ಲಾ 1,111 ಬೂತ್ ಗಳ ಸಭೆ ನಡೆಯಲಿದೆ ಎಂದು ಕುಯಿಲಾಡಿ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಎಸ್.ಟಿ. ಮೋರ್ಚಾ ಕಾರ್ಯದರ್ಶಿ ಉಮೇಶ್ ಎ. ನಾಯ್ಕ್, ಜಿಲ್ಲಾ ಎಸ್.ಸಿ. ಮೋರ್ಚಾ ಮತ್ತು ಎಸ್.ಟಿ. ಮೋರ್ಚಾ ಪ್ರಭಾರಿ ನಳಿನಿ ಪ್ರದೀಪ್ ರಾವ್, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಮತ್ತು ಜಿಲ್ಲಾ ಎಸ್.ಸಿ. ಮೋರ್ಚಾ ಮತ್ತು ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಸ್ವಾಗತಿಸಿ, ಮನೋಹರ್ ಎಸ್. ಕಲ್ಮಾಡಿ ವಂದಿಸಿದರು.