ಉಡುಪಿ: ಜಿಲ್ಲೆಯಲ್ಲಿ ವಾರಾಂತ್ಯ ಕರ್ಪ್ಯೂ ಹಾಗೂ ನಿಷೇಧಾಜ್ಞೆ ಜಾರಿಯಲ್ಲಿದ್ದು, ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಆಗಿವೆ. ಈ ಮಧ್ಯೆ ಸ್ವತಃ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರೇ ಶುಕ್ರವಾರ ರಾತ್ರಿ 8. 45ರ ಸುಮಾರಿಗೆ ಎಎಸ್ಪಿ ಮಗಳ ಮದುವೆಯ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಸಂದರ್ಭದಲ್ಲಿ ಡಿಸಿಯವರು ಮಾಸ್ಕ್ ಧರಿಸದೆ ಫೋಟೋಗೆ ಪೋಸ್ ಕೊಟ್ಟಿರುವುದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಸರ್ಕಾರದ ಮಾರ್ಗಸೂಚಿಯಲ್ಲಿ ಮದುವೆಗಳಿಗೆ 50 ಜನ ಮಾತ್ರ ಸೇರಿಲು ಅವಕಾಶ ನೀಡಲಾಗಿದೆ. ಆದರೆ ಅಧಿಕಾರಿಗಳು, ಜನಪ್ರತಿನಿಧಿಗಳು ಮದುವೆ ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಆಯೋಜಿಸುತ್ತಿದ್ದಾರೆ. ಇದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ.
ಕೊರೊನಾ ನೆಪವೊಡ್ಡಿ ಜಿಲ್ಲಾಡಳಿತ ಬಡವರ ಅಂಗಡಿಗಳನ್ನು ನಿರ್ದಾಕ್ಷಿಣ್ಯವಾಗಿ ಮುಚ್ಚಿಸಿದೆ. ಆಭರಣದ ಅಂಗಡಿ, ಬಟ್ಟೆ ಅಂಗಡಿಗಳನ್ನು ಮುಚ್ಚುವ ಮೂಲಕ ಬಡವರ ಮದುವೆಗಳಿಗೆ ಕಡಿವಾಣ ಹಾಕಿದೆ ಎಂದು ನೆಟ್ಟಿಗರು ಕಿಡಿಕಾರುತ್ತಿದ್ದಾರೆ. ಜಿಲ್ಲೆಯಲ್ಲಿ ಬಡವರಿಗೊಂದು ಕಾನೂನು, ಸಿರಿವಂತರಿಗೆ ಒಂದು ಕಾನೂನು ಇದೆ ಎಂದು ಆಕ್ರೋಶ ಹೊರಹಾಕಿದ್ದಾರೆ.












