ಕೊಲ್ಲೂರು: ಉಸ್ತುವಾರಿ ಸಚಿವರಿಂದ ನೂತನ ಪ್ರವಾಸಿ ಮಂದಿರ ಉದ್ಘಾಟನೆ

ಉಡುಪಿ: ಕೊಲ್ಲೂರಿಗೆ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ಲೋಕೋಪಯೋಗಿ ಇಲಾಖೆ ವತಿಯಿಂದ 1.50 ಕೋಟಿ ರೂ ವೆಚ್ಚದಲ್ಲಿನಿರ್ಮಿಸಲಾದ ನೂತನ ಪ್ರವಾಸಿ ಮಂದಿರವನ್ನು ಸೋಮವಾರದಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವರು, ಕೊಲ್ಲೂರು ಶ್ರೀಮೂಕಾಂಬಿಕಾ ದೇವರ ದರ್ಶನಕ್ಕಾಗಿ ದೇಶದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು. ದೂರದೃಷ್ಟಿಯಯನ್ನಿಟ್ಟುಕೊಂಡು ಯಾವುದೇ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದಲ್ಲಿ ಸಾರ್ವಜನಿಕರಿಗೆ ಅದರಿಂದ ಹೆಚ್ಚಿನ ಅನುಕೂಲವಾಗಲಿದೆ. ಗ್ರಾಮೀಣ ರಸ್ತೆಗಳ ನಿರ್ಮಾಣ, ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ, ಕಿಂಡಿ ಅಣೆಕಟ್ಟುಗಳ ನಿರ್ಮಾಣಗಳಂತಹ ಯೋಜನೆಗಳಿಂದ ಜನರಿಗೆ ಪ್ರಯೋಜನವಾಗಲಿದೆ.

ಮೀನುಗಾರಿಕೆಯನ್ನು ಲಾಭದಾಯಕವನ್ನಾಗಿ ಮಾಡಲು, ಮೀನುಗಾರರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಮೀನಿನ ಗುಣಮಟ್ಟ ಕಾಪಾಡಲು ಅಗತ್ಯವಿರುವ ಶೀತಲೀಕರಣ ವ್ಯವಸ್ಥೆ ನಿರ್ಮಾಣಕ್ಕೆ ಹಾಗೂ ಶೀತಲೀಕೃತ ವಾಹನಗಳನ್ನು ಒದಗಿಸುವುದು ಸೇರಿದಂತೆ ಮತ್ತಿತರ ಪರಿಕರಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಮಾತನಾಡಿ, ಕೊಲ್ಲೂರಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಪ್ರತಿವರ್ಷ ಅಧಿಕವಾಗುತ್ತಿದ್ದು, ಭಕ್ತಾದಿಗಳಿಗೆ ಹೆಚ್ಚಿನ ಸಂಖ್ಯೆಯ ವಸತಿ ಸೌಲಭ್ಯದ ಅಗತ್ಯವಿದ್ದು ಪ್ರಸ್ತುತ ನಿರ್ಮಿಸಿರುವ ಹೊಸ ಪ್ರವಾಸಿ ಮಂದಿರದ ಜೊತೆಗೆ ಈಗಾಗಲೇ ಇರುವ ಹಳೆಯ ಪ್ರವಾಸಿ ಮಂದಿರವನ್ನು ತೆರವುಗೊಳಿಸಿ ಆ ಪ್ರದೇಶದಲ್ಲಿ ಸುಸಜ್ಜಿತ ಹೊಸ ಪ್ರವಾಸಿ ಮಂದಿರ ನಿರ್ಮಾಣ ಮಾಡಲು ಈಗಾಗಲೇ 9.80 ಕೋಟಿ ರೂ ಮಂಜೂರಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಅರಂಭಗೊಳ್ಳಲಿದೆ. ತಮ್ಮ ಕ್ಷೇತ್ರ
ವ್ಯಾಪ್ತಿಯಲ್ಲಿ ಗುಣಮಟ್ಟದ ಕಾಮಗಾರಿಗಳ ನಿರ್ಮಾಣಕ್ಕೆ ಆದ್ಯತೆ ನೀಡಿದ್ದು, ಕಳೆಪೆ ಕಾಮಗಾರಿ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶಿವರಾಮ ಕೃಷ್ಣ ಭಟ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಬೈಂದೂರು ತಹಸೀಲ್ದಾರ್ ಶೋಭಾಲಕ್ಷ್ಮಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.