ಉಡುಪಿ: ಉಡುಪಿ ಜಿಲ್ಲೆಯ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಗ್ಯಾರಂಟಿ ಸಮಾವೇಶದ ಪೂರ್ವಭಾವಿ ಸಭೆಯು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಮಾ. 8 ರಂದು ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಇದೆಲ್ಲವನ್ನೂ ಅತ್ಯಂತ ಯಶಸ್ವಿಯಾಗಿ ರಾಜ್ಯದ ಪ್ರತಿಯೊಂದು ಜನಸಾಮಾನ್ಯರಿಗೆ ತಲುಪಿಸಿ ನುಡಿದಂತೆ ನಡೆದಿದ್ದು ಮಾ. 13 ರಂದು ಎಂ.ಜಿ.ಎಂ ಮೈದಾನದಲ್ಲಿ ಉಡುಪಿ ಜಿಲ್ಲೆಯ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಗ್ಯಾರಂಟಿ ಸಮಾವೇಶವು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ರಾಜ್ಯದ ನಾಯಕರು, ಜಿಲ್ಲೆಯ ನಾಯಕರು ಉಪಸ್ಥಿತರಿರುವರು.
ಈ ಪೂರ್ವಭಾವಿ ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಉಡುಪಿ ವಿಧಾನಸಭಾ ಕ್ಷೇತ್ರದ ನಾಯಕ ಪ್ರಸಾದ್ರಾಜ್ ಕಾಂಚನ್, ನಾಯಕರಾದ ಕುಶಲ್ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ದಿವಾಕರ್ ಕುಂದರ್, ಮಮತಾ ಶೆಟ್ಟಿ, ಸೌರಭ್ ಬಲ್ಲಾಳ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ಘಟಕದ ಅಧ್ಯಕ್ಷರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರೆಲ್ಲರೂ ಭಾಗವಹಿಸಿದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ 35 ನಗರಸಭಾ ವಾರ್ಡ್ ಹಾಗೂ 4 ಪಂಚಾಯತ್ಗಳಿಗೆ ಉಸ್ತುವಾರಿಗಳ ನೇಮಕ ಮಾಡಿ ಆಯಾ ವಾರ್ಡ್ ಹಾಗೂ ಪಂಚಾಯತ್ಗಳಿಂದ ಗ್ಯಾರಂಟಿ ಫಲಾನುಭವಿಗಳನ್ನು ಮಾ.13 ರಂದು ನಡೆಯಲಿರುವ ಗ್ಯಾರಂಟಿ ಸಮಾವೇಶಕ್ಕೆ ಕರೆತರುವ ಜವಾಬ್ದಾರಿಯನ್ನು ನೀಡಿ ಗ್ಯಾರಂಟಿ ಫಲಾನುಭವಿಗಳ ಗ್ಯಾರಂಟಿ ಸಮಾವೇಶವನ್ನು ಯಶಸ್ವಿಗೊಳಿಸಲು ಕರೆ ನೀಡಲಾಯಿತು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಸ್ವಾಗತಿಸಿ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ವಂದಿಸಿದರು.