ಡಿಸೆಂಬರ್ 3 ರಂದು ಜಿಲ್ಲಾ ಮಟ್ಟದ ವಿಕಲಚೇತನರ ದಿನಾಚರಣೆ

ಉಡುಪಿ: ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿಕಲಚೇತನರ ದಿನಾಚರಣೆ ಆಚರಿಸುವ ಕುರಿತ ಪೂರ್ವಭಾವಿ ಸಭೆಯು ಅಪರ ಜಿಲ್ಲಾಧಿಕಾರಿ ವೀಣಾ.ಬಿ.ಎನ್ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲಾ ಮಟ್ಟದ ವಿಕಲಚೇತನರ ದಿನಾಚರಣೆಯನ್ನು ಡಿಸೆಂಬರ್ 3 ರಂದು ಉಡುಪಿ ನಗರದ ಅಮ್ಮಣ್ಣಿ ರಾಮಣ್ಣ ಸಭಾಭವನದಲ್ಲಿ ಬೆಳಗ್ಗೆ 10.30 ಕ್ಕೆ ಆಚರಿಸಲಾಗುವುದು ಎಂದರು.

ವಿಶ್ವ ವಿಕಲಚೇತನರ ದಿನಾಚರಣೆಯು ಡಿಸೆಂಬರ್ 3 ರಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿಯೂ ಕಾರ್ಯಕ್ರಮವನ್ನು ಆಯೋಜಿಸಿ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಕಲಚೇತನರಿಗೆ ಕ್ರೀಡಾ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದ ಅವರು, ಜಿಲ್ಲಾ ವ್ಯಾಪ್ತಿಯಲ್ಲಿ 21 ವಿವಿಧ ರೀತಿಯ ಅಂಗವಿಕಲತೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಅಂದು ಬೆಳಗ್ಗೆ 9.30 ಕ್ಕೆ ವಿಕಲಚೇತನರ ಪೋಷಕರನ್ನೊಳಗೊಂಡ ಜಾಥಾ ಕಾರ್ಯಕ್ರಮವು ಉಡುಪಿ ಕೋರ್ಟ್ ಸರ್ಕಲ್‌ನಿಂದ ಅಮ್ಮಣ್ಣಿ ರಾಮಣ್ಣ ಸಭಾಭವನದವರೆಗೆ ನಡೆಯಲಿದೆ. ಸಮಾರಂಭಕ್ಕೆ ವಿಶೇಷ ಮಕ್ಕಳನ್ನು ವಿಶಿಷ್ಟವಾಗಿ ಕರೆತರುವ ಬಗ್ಗೆ ಜಾಗೃತಿ ವಹಿಸಿ ಯಾವುದೇ ರೀತಿಯ ಲೋಪವಾಗದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಸ್ವಯಂ ಸೇವಾ ಸಂಸ್ಥೆಗಳು ಸಹ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದರು.

ಶಿಷ್ಟಾಚಾರದಂತೆ ಜನಪ್ರತಿನಿಧಿಗಳು ಹಾಗೂ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದ ಅವರು, ಅಂಗವಿಕಲತೆಗೆ ಕಾರಣ, ಪರಿಹಾರ ಮತ್ತು ಅಂಗವಿಕಲರಿಗೆ ಸಿಗುವ ಸವಲತ್ತುಗಳ ಬಗ್ಗೆ ಯಕ್ಷಗಾನ ಪ್ರಸಂಗದ ಮೂಲಕ ಅರಿವು ಮೂಡಿಸಬೇಕು ಎಂದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವೀಣಾ ವಿವೇಕಾನಂದ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.