ಸೆಪ್ಟಂಬರ್ 5 ರಂದು ರಜತಾದ್ರಿಯಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ

ಉಡುಪಿ: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ಜಿಲ್ಲೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ತಾಲೂಕು ಹಾಗೂ ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣಾ ಸಮಿತಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಎಸ್.ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಸೆಪ್ಟಂಬರ್ 5 ರಂದು ಮಧ್ಯಾಹ್ನ 2.30 ಕ್ಕೆ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿಲಿದ್ದಾರೆ.