ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ (ಜೂನ್ 23) ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರ ವರೆಗೆ ಎಲ್ಲಾ ಅಂಗಡಿ, ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬಟ್ಟೆ, ಜೆರಾಕ್ಸ್, ಚಪ್ಪಲಿ, ಮೊಬೈಲ್ ಅಂಗಡಿ ಸೇರಿದಂತೆ ಇತರ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ. ಹೀಗಾಗಿ ಅಂಗಡಿ ತೆರೆಯಲು ಅವಕಾಶ ಕಲ್ಪಿಸಿಕೊಡುವಂತೆ ಮನವಿ ಮಾಡಿಕೊಂಡಿದ್ದರು. ಅಲ್ಲದೆ, ಜಿಲ್ಲೆಯ ಶಾಸಕರು, ಸಂಸದರು ಲಾಕ್ ಡೌನ್ ನಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ನಿಂದ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗಿತ್ತು. ಅದರಂತೆ ನಾಳೆ (ಜೂನ್ 23) ಜಿಲ್ಲೆಯಲ್ಲಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲಾ ಅಂಗಡಿ, ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ತಗ್ಗಿಸಲು ಸೂಕ್ತ ಕ್ರಮ ವಹಿಸಬೇಕೆಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಹೀಗಾಗಿ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ವ್ಯಾಪಾರಸ್ಥರು ವ್ಯವಹಾರ ನಡೆಸಬೇಕೆಂದು ಸಚಿವರು ಸೂಚನೆ ನೀಡಿದ್ದಾರೆ.