ರಾಜ್ಯದ ಮುಂದಿನ ಮುಖ್ಯಮಂತ್ರಿ ಆಯ್ಕೆ: ದೆಹಲಿಗೆ ತೆರಳಿದ ಡಿ.ಕೆ ಶಿವಕುಮಾರ್

ಬೆಂಗಳೂರು: ಮುಖ್ಯಮಂತ್ರಿಯಾಗಬೇಕೆಂಬ ಹಂಬಲದಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಇಂದು ರಾಷ್ಟ್ರ ರಾಜಧಾನಿಗೆ ತೆರಳುತ್ತಿದ್ದು, ಮುಖ್ಯಮಂತ್ರಿ ಅಭ್ಯರ್ಥಿ ಮತ್ತು ಕಾಂಗ್ರೆಸ್ ಸರ್ಕಾರ ರಚನೆ ಕುರಿತು ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, “ನಾನು ಒಬ್ಬನೇ ದೆಹಲಿಗೆ ಹೋಗುತ್ತಿದ್ದೇನೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ನನ್ನನ್ನು ಏಕಾಂಗಿಯಾಗಿ ದೆಹಲಿಗೆ ಕರೆದಿದ್ದಾರೆ. ನಾನು ಏಕಾಂಗಿಯಾಗಿ ಹೋಗುತ್ತಿದ್ದೇನೆ” ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅದಾಗಲೆ ತಮ್ಮ ನಿಷ್ಠಾವಂತ ಶಾಸಕರೊಂದಿಗೆ ಸೋಮವಾರದಂದೇ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

“ಕಾಂಗ್ರೆಸ್ ನನ್ನ ಮನೆ ಮತ್ತು ದೇವಸ್ಥಾನ. ಕಾಂಗ್ರೆಸ್ ಪಕ್ಷವೇ ನನ್ನ ಶಕ್ತಿ. ಇಂದು ನನ್ನ ಆರೋಗ್ಯ ಚೆನ್ನಾಗಿದೆ” ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಡಿ.ಕೆ ಶಿವಕುಮಾರ್ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಮಾತುಕತೆ ನಡೆಸುವ ನಿರೀಕ್ಷೆಯಿದೆ.