ಉಡುಪಿ: ಆಯುರ್ವೇದ ವೈದ್ಯರಿಗೂ ಶಸ್ತ್ರಚಿಕಿತ್ಸೆಗಳನ್ನು ಮಾಡಲು ಅವಕಾಶ ನೀಡಿ ಕೇಂದ್ರ ಸರಕಾರ ಗಜೆಟ್ ನೋಟಿಫಿಕೇಶನ್ ಹೊರಡಿಸಿರುವುದನ್ನು ವಿರೋಧಿಸಿ ಅಲೋಪತಿ ವೈದ್ಯರು ಡಿಸೆಂಬರ್ 11ರಂದು ತುರ್ತು ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲಾ ಓಪಿಡಿ ಸೇವೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘ ತಿಳಿಸಿದೆ.
ವೈದ್ಯಕೀಯ ವ್ಯವಸ್ಥೆಯನ್ನು ಮಿಶ್ರಗೊಳಿಸುವುದನ್ನು ಭಾರತೀಯ ವೈದ್ಯಕೀಯ ಸಂಘ ತೀವ್ರವಾಗಿ ಖಂಡಿಸುತ್ತದೆ. ಇದು ಕೇವಲ ವೃತ್ತಿಯ ವಿಷಯವಲ್ಲ. ಇದು ಆರೋಗ್ಯ ರಕ್ಷಣೆ ಮತ್ತು ವಿತರಣಾ ವ್ಯವಸ್ಥೆಯ ಮೇಲೆ ಗಂಭೀರವಾದ ದುಷ್ಪರಿಣಾಮ ಉಂಟುಮಾಡುತ್ತದೆ ಎಂದು ಸಂಘ ಕಳವಳ ವ್ಯಕ್ತಪಡಿಸಿದೆ.
ಸ್ನಾತಕೋತ್ತರ ಆಯುರ್ವೇದ ಶಿಕ್ಷಣ ತಿದ್ದುಪಡಿ ನಿಯಮಾವಳಿಗಳ ಅಧಿಸೂಚನೆಯನ್ನು ಕೂಡಲೇ ಹಿಂಪಡೆಯಬೇಕೆಂದು ಸಂಘ ಒತ್ತಾಯಿಸಿದೆ.