80’S ಟ್ರೆಂಡ್ ಗೆ ಮರುಳಾಗಿ ಸೈಬರ್ ವಂಚಕರ ಜಾಲಕ್ಕೆ ಬೀಳಬೇಡಿ: ಪೊಲೀಸ್ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿರುವ 80ರ ದಶಕದ ಮಾದರಿಯ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮಾದನಾಯಕನಹಳ್ಳಿ ಪೊಲೀಸರು ಮನವಿ ಮಾಡಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೋಗಳನ್ನು 80ರ ದಶಕದ ಚಿತ್ರಗಳ ಮಾದರಿಯಲ್ಲಿ ಎಡಿಟ್ ಮಾಡಿಸಿಕೊಳ್ಳುವ ಟ್ರೆಂಡ್ ಹೆಚ್ಚಾಗಿದೆ. ಇದಕ್ಕಾಗಿ ಹಲವರು ವಿವಿಧ ಆ್ಯಪ್‌ಗಳು ಹಾಗೂ ಆನ್‌ಲೈನ್ ಲಿಂಕ್‌ಗಳನ್ನು ಬಳಸುತ್ತಿದ್ದಾರೆ. ಆದರೆ, ಅಪರಿಚಿತ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡುವುದು ಅಥವಾ ಅನುಮಾನಾಸ್ಪದ ಲಿಂಕ್‌ಗಳನ್ನು ತೆರೆಯುವುದರಿಂದ ಸೈಬರ್ ವಂಚನೆಗೆ ಒಳಗಾಗುವ ಸಾಧ್ಯತೆ ಇದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಫೋಟೋ ಎಡಿಟಿಂಗ್ ಅಥವಾ ಹೊಸ ಮಾದರಿಯ ಚಿತ್ರ ಸೃಷ್ಟಿಸುವ ನೆಪದಲ್ಲಿ ಸೈಬರ್ ವಂಚಕರು ವೈಯಕ್ತಿಕ ಮಾಹಿತಿ, ದಾಖಲೆಗಳ ವಿವರ ಸೇರಿದಂತೆ ಸೂಕ್ಷ್ಮ ಮಾಹಿತಿಯನ್ನು ಕೇಳುವ ಸಾಧ್ಯತೆ ಇದೆ. ಹೀಗಾಗಿ ಪಾಸ್‌ವರ್ಡ್, ಬ್ಯಾಂಕ್ ಖಾತೆ ಹಾಗೂ ಇತರೆ ಗೌಪ್ಯ ಮಾಹಿತಿಯನ್ನು ಅಪರಿಚಿತ ವ್ಯಕ್ತಿಗಳು ಅಥವಾ ಆ್ಯಪ್‌ಗಳೊಂದಿಗೆ ಹಂಚಿಕೊಳ್ಳಬಾರದು ಎಂದು ಪೊಲೀಸರು ಸಲಹೆ ನೀಡಿದ್ದಾರೆ.

ಅಪರಿಚಿತ ಆ್ಯಪ್‌ಗಳನ್ನು ಇನ್‌ಸ್ಟಾಲ್ ಮಾಡದಂತೆ ಹಾಗೂ ಅನುಮಾನಾಸ್ಪದ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಯಾವುದೇ ಆನ್‌ಲೈನ್ ಸೇವೆ ಬಳಸುವ ಮುನ್ನ ಅದರ ವಿಶ್ವಾಸಾರ್ಹತೆಯನ್ನು ಪರಿಶೀಲಿಸುವುದು ಅಗತ್ಯ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ರೆಂಡಿಂಗ್ ವಿಷಯಗಳನ್ನು ಬಳಸಿಕೊಂಡು ಸೈಬರ್ ವಂಚಕರು ಜನರನ್ನು ಸೆಳೆಯುವ ಸಾಧ್ಯತೆ ಇರುವುದರಿಂದ ಸಾಮಾಜಿಕ ಜಾಲತಾಣ ಬಳಕೆದಾರರು ಹೆಚ್ಚಿನ ಜಾಗ್ರತೆ ವಹಿಸಬೇಕು. ಯಾವುದೇ ಟ್ರೆಂಡಿಂಗ್ ಫೋಟೋ ಎಡಿಟಿಂಗ್ ಸೇವೆ ಬಳಸುವ ಮುನ್ನ ಅದರ ಮೂಲ, ಆ್ಯಪ್ ಮತ್ತು ಲಿಂಕ್‌ನ ವಿಶ್ವಾಸಾರ್ಹತೆಯನ್ನು ಪರಿಶೀಲಿಸಬೇಕು ಎಂದು ಮಾದನಾಯಕನಹಳ್ಳಿ ಪೊಲೀಸರು ಪ್ರಕಟಣೆ ಮೂಲಕ ಜನಜಾಗೃತಿ ಮೂಡಿಸಿದ್ದಾರೆ.