ಡಾ. ಬಿ.ಎಂ. ಹೆಗ್ಡೆಗೆ ಪದ್ಮವಿಭೂಷಣ

ಮಂಗಳೂರು: ಖ್ಯಾತ ಹೃದ್ರೋಗ ತಜ್ಞ ಡಾ. ಬೆಳ್ಳೆ ಮೋನಪ್ಪ ಹೆಗ್ಡೆ (ಡಾ.ಬಿ.ಎಂ.ಹೆಗ್ಡೆ) ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಲಭಿಸಿದೆ.

1938ರ ಆಗಸ್ಟ್ 18ರಂದು ಜನಿಸಿದ ಹೆಗ್ಡೆ, ಹಿರಿಯಡಕದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ, ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಇಂಟರ್‌ಮೀಡಿಯೆಟ್ ಹಾಗೂ ಮದ್ರಾಸ್ ವಿಶ್ವವಿದ್ಯಾಲಯದಿಂದ ವೈದ್ಯ (ಎಂಬಿಬಿಎಸ್) ಪದವಿಯನ್ನು(1960)  ಪಡೆದಿದ್ದಾರೆ.

ಲಖನೌ ವಿಶ್ವವಿದ್ಯಾಲಯದಲ್ಲಿ ಎಂ.ಡಿ. ಪದವಿ ಬಳಿಕ ಉನ್ನತ ಶಿಕ್ಷಣಕ್ಕಾಗಿ ಲಂಡನ್‌ಗೆ ತೆರಳಿದರು. ನೊಬೆಲ್ ಪುರಸ್ಕೃತ ಪ್ರೊ. ಬರ್ನಾರ್ಡ್ ಲೋವ್ನ್ ಜೊತೆ ಕೆಲಸ ಮಾಡಿದರು. ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಂಶುಪಾಲ ಮತ್ತು ಡೀನ್ ಆಗಿದ್ದರು. ಗುಜರಾತ್‌ ಹೆಲ್ತ್‌ ಸೊಸೈಟಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಮಣಿಪಾಲ ಉನ್ನತ ಶಿಕ್ಷಣ ಸಂಸ್ಥೆಯ (ಮಾಹೆ) ಕುಲಪತಿಗಳಾಗಿ ಸೇವೆ ಸಲ್ಲಿಸಿದ್ದು, ಮಂಗಳೂರಿನಲ್ಲಿ ವಿಶ್ರಾಂತ ಜೀವನ ಸಾಗಿಸುತ್ತಿದ್ದಾರೆ. ವೈದ್ಯಕೀಯ ವಿಜ್ಞಾನಗಳ ಸಾಹಿತ್ಯಕ್ಕೂ ಕೊಡುಗೆ ನೀಡಿದ್ದಾರೆ.

1997ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 1999ರಲ್ಲಿ ಡಾ.ಬಿ.ಸಿ.ರಾಯ್ ರಾಷ್ಟ್ರೀಯ ಪ್ರಶಸ್ತಿ ಹಾಗೂ 2010ರಲ್ಲಿ ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ– ಪುರಸ್ಕಾರಗಳಿಗೆ ಅವರು ಪಾತ್ರರಾಗಿದ್ದಾರೆ.