ಉಡುಪಿ, ಸೆ. 1: ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ವೃದ್ಧಿ ಸಾಧ್ಯ. ಇಂದು ಕ್ರೀಡಾ ಕ್ಷೇತ್ರ ಅಭಿವೃದ್ಧಿ ಹೊಂದುತ್ತಿದ್ದು ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಕ್ರೀಡಾಕ್ಷೇತ್ರದಲ್ಲಿ ಇದೆ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.
ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೇಟಿಕ್ ಅಸೋಸಿಯೇಷನ್, ಲಯನ್ಸ್ ಕ್ಲಬ್ ಮಿಡ್‌ಟೌನ್ ಉಡುಪಿ, ಉಡುಪಿ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್ ಮತ್ತು ಕಾಲೇಜು ದೈಹಿಕ ಶಿಕ್ಷಣ ವಿಭಾಗ ಇದರ ಸಹಯೋಗದಲ್ಲಿ ಕಾಲೇಜಿನ ಯು.ಜಿ ಎ.ವಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೇಟಿಕ್ ಅಸೋಸಿಯೇಷನ್‌ನ ಅಧ್ಯಕ್ಷರು ಶ್ರೀ ಹರಿಪ್ರಸಾದ್ ರೈ ಮಾತನಾಡಿ ಕ್ರೀಡೆಯಲ್ಲಿ ಶಿಸ್ತು ಬಹಳ ಮುಖ್ಯವಾಗಿದೆ. ಬಿಡುವಿನ ಸಮಯದಲ್ಲಿ ಮೊಬೈಲ್ ಹಿಡಿದು ಸಮಯ ವ್ಯರ್ಥ ಮಾಡುವ ಬದಲು ಯಾವುದಾದರೊಂದು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಉತ್ತಮ ಆರೋಗ್ಯವನ್ನು ಪಡೆಯಬಹುದು ಎಂದರು.
ಉಡುಪಿ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್‌ನ ಅಧ್ಯಕ್ಷ ಸಿ ಎ ದೇವ್ ಆನಂದ್ ಹಾಗೂ ಲಯನ್ಸ್ ಕ್ಲಬ್ ಮಿಡ್‌ಟೌನ್‌ನ ಅಧ್ಯಕ್ಷ ಲಯನ್ ಪುರುಷೋತ್ತಮ್ ನಾಯಕ್ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕ್ರೀಡೆಯಲ್ಲಿ ವಿಶೇಷ ಸಾಧನೆ ಮಾಡಿದ ಕಾಲೇಜಿನ ವಿದ್ಯಾರ್ಥಿನಿಯರನ್ನು ಗುರುತಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸೋಜನ್ ಕೆ.ಜಿ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ನಿಕೇತನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ರಾಮಚಂದ್ರ ಪಾಟ್ಕರ್ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕ್ರೀಡಾ ಪ್ರತಿನಿಧಿ ಕು. ಉಷಾ ಕಾರ್ಯಕ್ರಮವನ್ನು ನಿರೂಪಿಸಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮಂಜುನಾಥ್ ವಂದಿಸಿದರು.












