ದ.ಕ ಜಿಲ್ಲೆಯ 100 ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ಧಾರ್ಮಿಕ ಸಂಸ್ಥೆಗಳ ಮಹಾಸಂಘದ ನಿರ್ಧಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 100 ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ರಾಜ್ಯ ಸಂಯೋಜಕ ಮೋಹನ್ ಗೌಡ ತಿಳಿಸಿದ್ದಾರೆ.

ಅವರು ಮಂಗಳೂರಿನ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಂದಿರ ಅಧಿವೇಶನ ಪರಿಷತ್ತಿನ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, “ದೇವಾಲಯಗಳು ಹಿಂದೂಗಳಿಗೆ ಪವಿತ್ರ ಸ್ಥಳಗಳಾಗಿವೆ. ಅನೇಕ ಜನರು ಅನಾಗರಿಕ ಉಡುಪುಗಳನ್ನು ಧರಿಸಿ ದೇವಾಲಯಗಳಿಗೆ ಭೇಟಿ ನೀಡುತ್ತಾರೆ, ಇದು ದೇವಾಲಯದ ಪಾವಿತ್ರ್ಯತೆಯನ್ನು ಕಲುಷಿತಗೊಳಿಸುತ್ತದೆ” ಎಂದಿದ್ದಾರೆ.

100 ಕ್ಕೂ ಹೆಚ್ಚು ದೇವಾಲಯಗಳು ಸ್ವಯಂಪ್ರೇರಿತವಾಗಿ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪರಿಚಯಿಸಲು ಒಪ್ಪಿಕೊಂಡಿವೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಹೇಳಿದೆ. ವರದಿಯ ಪ್ರಕಾರ, ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಕುರಿತು ಬೋರ್ಡ್ ಅಳವಡಿಸಿ, ದೇವಸ್ಥಾನಗಳಿಗೆ ಭೇಟಿ ನೀಡುವವರಲ್ಲಿ ಜಾಗೃತಿ ಮೂಡಿಸಲಾಗುವುದು. ಯಾರಾದರೂ ಅಸಭ್ಯ ಉಡುಗೆಯಲ್ಲಿ ಬಂದರೆ ಅವರಿಗೆ ದೇವಸ್ಥಾನದಲ್ಲಿ ಸಾತ್ವಿಕ ಉಡುಗೆ ನೀಡಲು ಕ್ರಮಕೈಗೊಳ್ಳಲಾಗುವುದು. ಹಂತ ಹಂತವಾಗಿ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗುವುದು ಎಂದು ಮೋಹನ್ ಗೌಡ ತಿಳಿಸಿದ್ದಾರೆ.

ಶಿಥಿಲಾವಸ್ಥೆಯಲ್ಲಿರುವ ಐತಿಹಾಸಿಕ ದೇವಾಲಯಗಳ ಜೀರ್ಣೋದ್ಧಾರಕ್ಕೆ ಅನುಕೂಲ ಮಾಡಿಕೊಡುವಂತೆ ಸರ್ಕಾರವನ್ನು ಒತ್ತಾಯಿಸಲು ಮಹಾಸಂಘ ನಿರ್ಧರಿಸಿದೆ. ಸರಕಾರ ಸರ್ವೆ ನಡೆಸಿ ದೇವಸ್ಥಾನಗಳಿರುವ ಜಾಗ ಒತ್ತುವರಿ ಮಾಡಿಕೊಂಡಿರುವವರನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದೆ.

ದೇಗುಲ ಭೂಮಿ ಒತ್ತುವರಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ತ್ವರಿತ ನ್ಯಾಯಾಲಯ ಸ್ಥಾಪಿಸಬೇಕು. ದೇವಾಲಯಗಳು ಮತ್ತು ಪವಿತ್ರ ಸ್ಥಳಗಳ ಬಳಿ ಮಾಂಸ ಮತ್ತು ಮದ್ಯ ಮಾರಾಟವನ್ನು ನಿಷೇಧಿಸುವ ಆದೇಶವನ್ನು ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಸಾಮಾನ್ಯ ನಿಧಿಯನ್ನು ಇತರ ಉದ್ದೇಶಗಳಿಗೆ ಬಳಸಬಾರದು. ದೇವಸ್ಥಾನದ ಜಾತ್ರೆಗಳಲ್ಲಿ ಅನ್ಯ ಧರ್ಮೀಯರು ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡಬಾರದು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.