ಉಡುಪಿ: ಸಫಾಯಿ ಕರ್ಮಚಾರಿಗಳ ಶ್ರೇಯೋಭಿವೃದ್ದಿಗೆ ಸರ್ಕಾರ ರೂಪಿಸಿರುವ ಯೋಜನೆಗಳು ಹಾಗೂ
ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮ್ಯಾನ್ಯವಲ್ ಸ್ಕ್ಯಾವೆಂಜರ್ ಪದ್ದತಿಯನ್ನು ಸಂಪೂರ್ಣವಾಗಿ ನಿಷೇಧಿಸಿ, ಕಾಯಿದೆ ಹಾಗೂ ನಿಯಮಗಳನ್ನು ಜಾರಿಗೆ ತಂದು ಈ ಪದ್ದತಿಯನ್ನು ತೊಲಗಿಸಿ, ಒಂದೊಮ್ಮೆ ಕಾಯಿದೆಯನ್ನು ಉಲ್ಲಂಘಿಸಿದ್ದು ಕಂಡುಬಂದಲ್ಲಿ ಅಂತಹವರ ವಿರುದ್ದ ಕಾನೂನಿನಡಿ ಕ್ರಮ ಕೈಗೊಳ್ಳಲು ಸೂಚಿಸಿದರು.
ಮ್ಯಾನ್ಯುವಲ್ ಸ್ಕ್ಯಾವೆಂಜರ್ ವೃತ್ತಿಯಿಂದ ಹೊರ ಬಂದಿರುವವರಿಗೆ ಸೂಕ್ತ ಪುರ್ನವಸತಿ ಒದಗಿಸಬೇಕು, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಸಫಾಯಿ ಕರ್ಮಚಾರಿಗೆ ನಿವೇಶನ ಮಂಜೂರಾತಿಯನ್ನು ಪ್ರಥಮ ಆದ್ಯತೆಯ ಮೇಲೆ ನೀಡಬೇಕು. ವೃತ್ತಿಯಲ್ಲಿದ್ದ ಮೃತಪಟ್ಟ ಕಾರ್ಮಿಕರ ಕುಟುಂಬದ ಅವಲಂಬಿತ ಸದಸ್ಯರಿಗೆ ಗುರುತಿನ ಚೀಟಿ ಹಾಗೂ ಪುರ್ನವಸತಿ ಕಲ್ಪಿಸುವ ಕಾರ್ಯವಾಗಬೇಕು. ಸಕ್ಕಿಂಗ್ ಹಾಗೂ ಜಟ್ಟಿಂಗ್ ಯಂತ್ರಗಳನ್ನು ಖರೀದಿಸಲು ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಠಿಯಿಂದ ಪ್ರತಿ 3 ತಿಂಗಳಿಗೊಮ್ಮೆ ಸಾಮಾನ್ಯ ಅರೋಗ್ಯ ತಪಾಸಣೆ ಹಾಗೂ ವಾರ್ಷಿಕವಾಗಿ ಎರಡು ಬಾರಿ ಸಂಪೂರ್ಣ ದೈಹಿಕ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿ, ವರದಿಯನ್ನು ಜಿಲ್ಲಾ ಜಾಗೃತಿ ಸಮಿತಿಗೆ ನೀಡಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು , ಜಾಗೃತ ಸಮಿತಿ ಸದಸ್ಯರುಗಳಾದ ವೈ.ಲಕ್ಷ್ಮಣ್ , ಗಣೇಶ್, ಅನಿತಾ ಹಾಗೂ ಎಲ್ಲಾ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.