ಉಡುಪಿ: ಜಿಲ್ಲೆಯಲ್ಲಿ ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನದ 100 ದಿನಗಳ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕ್ರಿಯಾ ಯೋಜನೆಯನ್ನು ರೂಪಿಸಲಾಗುತ್ತಿದ್ದು, ಅಭಿಯಾನದ ಯಶಸ್ಸಿಗೆ ಪ್ರತಿಯೊಬ್ಬರೂ ಸಹಕರಿಸುವಂತೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ ಹೇಳಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನದ 100 ದಿನಗಳ ಕಾರ್ಯಕ್ರಮದ ಕ್ರಿಯಾ ಯೋಜನೆ ರೂಪಿಸಲು ಆಯೋಜಿಸಲಾದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ದೇಶವನ್ನು ಬಾಲ್ಯ ವಿವಾಹ ಮುಕ್ತ ರಾಷ್ಟ್ರವನ್ನಾಗಿ ರೂಪಿಸುವ ರಾಷ್ಟ್ರೀಯ ಉಪಕ್ರಮದ ಭಾಗವಾಗಿ ಬಾಲ್ಯವಿವಾಹನವನ್ನು ತಡೆಗಟ್ಟುವ ಹಾಗೂ ವಿಶೇಷವಾಗಿ ಹದಿಹರೆಯದ ಹೆಣ್ಣುಮಕ್ಕಳ ರಕ್ಷಣೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನಕ್ಕೆ ನವೆಂಬರ್ 27 ರಂದು ಚಾಲನೆ ನೀಡಲಾಗುತ್ತಿದೆ ಎಂದರು.
ಮಕ್ಕಳ ರಕ್ಷಣೆಯಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಮಕ್ಕಳ ರಕ್ಷಣಾ ಸಮಿತಿಗಳು ನಿರಂತರವಾಗಿ ಕಾರ್ಯನಿರ್ವಹಿಸುವುದರಿಂದ ಬಾಲ್ಯವಿವಾಹದಂತಹ ಅನಿಷ್ಠ ಪದ್ಧತಿಗಳಿಗೆ ಕಡಿವಾಣ ಹಾಕಬೇಕು. ಅಭಿಯಾನದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮರಳಿ ಶಾಲೆಗೆ ದಾಖಲಿಸುವ ಮೂಲಕ ಬಾಲ್ಯವಿವಾಹದ ಸಾಧ್ಯತೆಗಳನ್ನು ತಡೆಯುವಲ್ಲಿ ಕ್ರಮವಹಿಸಬೇಕು ಎಂದರು.
ಬಾಲ್ಯವಿವಾಹದಿಂದ ಹಲವು ಗಂಭೀರ ಸಮಸ್ಯೆಗಳು ಎದುರಾಗುತ್ತವೆ. ಚಿಕ್ಕ ವಯಸ್ಸಿನಲ್ಲೇ ಮದುವೆಯಾಗುವ ಹೆಣ್ಣುಮಕ್ಕಳು ಅಪ್ರಾಪ್ತ ವಯಸ್ಸಿನಲ್ಲಿ ಗರ್ಭಧರಿಸುವ ಅಪಾಯ ಎದುರಿಸುತ್ತಾರೆ. ಅವರ ಶಿಕ್ಷಣ ಅರ್ಧಕ್ಕೆ ನಿಲ್ಲುತ್ತದೆ. ಕೌಟುಂಬಿಕ ಹಿಂಸಾಚಾರಕ್ಕೆ ಒಳಗಾಗುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಬಾಲ್ಯ ವಿವಾಹ ಆಗುವುದರಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಮುದಾಯಗಳಿಗೆ ಅರಿವು ಮೂಡಿಸಿ, ಮಕ್ಕಳ ಹಕ್ಕುಗಳು ಮತ್ತು ಭವಿಷ್ಯವನ್ನು ರಕ್ಷಿಸುವ ಕೆಲಸವನ್ನು ಅಭಿಯಾನದ ಮೂಲಕ ಅಧಿಕಾರಿಗಳು ಮಾಡಬೇಕು ಎಂದರು.
ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನದ 100 ದಿನಗಳ ಕಾರ್ಯಕ್ರಮದಲ್ಲಿ, ಬಾಲ್ಯ ವಿವಾಹ ಮುಕ್ತ ಭಾರತ ಪೋರ್ಟಲ್ ಮೂಲಕ ಕಾರ್ಯಕ್ರಮಗಳ ವರದಿ ದಾಖಲಿಸಬೇಕು. ತುರ್ತು ಸಂದರ್ಭಗಳಲ್ಲಿ ಮಕ್ಕಳ ಸಹಾಯವಾಣಿ 1098 ಅಥವಾ 112 ಗೆ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಮಾತನಾಡಿ, ಜಿಲ್ಲೆಯಲಿರುವ ಮಕ್ಕಳು ಮಾತ್ರವಲ್ಲದೇ ಕೂಲಿ ಕೆಲಸ ಸೇರಿದಂತೆ ಮತ್ತಿತರ ಕೆಲಸಗಳಿಗೆ ಹೊರಜಿಲ್ಲೆಗಳಿಂದ ವಲಸೆ ಬಂದಿರುವ ಕುಟುಂಬದಲ್ಲಿನ ಮಕ್ಕಳ ಕಾಳಜಿ ಮಾಡುವುದು ಸಹ ನಮ್ಮಗಳ ಜವಾಬ್ದಾರಿಯಾಗಿದೆ. ಮಕ್ಕಳ ಸಂಬಂಧಿತ ವಿಷಯಗಳಿಗೆ ಸೂಕ್ಷö್ಮವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು.
ಪಡಿ-ಜೆ.ಆರ್.ಸಿ ಸಂಸ್ಥೆಯ ಕಾರ್ಯಕ್ರಮ ಸಂಯೋಜಕ ರೆನಿ ಪೀಟರ್ ಡಿಸೋಜಾ ಮಾತನಾಡಿ, ಬಾಲ್ಯವಿವಾಹದ ಅಪಾಯದಲ್ಲಿರುವ ಮಕ್ಕಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ, ಬಾಲ್ಯವಿವಾಹವನ್ನು ತಡೆಗಟ್ಟುವುದು, ಸಮುದಾಯದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸರ್ಕಾರಿ ಇಲಾಖೆಗಳು, ಗ್ರಾಮ ಪಂಚಾಯಿತಿಗಳು, ಶಿಕ್ಷಣ ಸಂಸ್ಥೆಗಳು, ನಾಗರಿಕ ಸಮಾಜ ಸಂಘಟನೆಗಳು ಹಾಗೂ ಸಮುದಾಯಗಳ ನಡುವೆ ಸಮನ್ವಯದ ಕ್ರಮಗಳನ್ನು ಬಲಪಡಿಸುವ ಮೂಲಕ ಉಡುಪಿ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ರೂಪಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಾಲ್ಯವಿವಾಹ ತಡೆಗಟ್ಟುವ ವ್ಯವಸ್ಥೆಯನ್ನು ಬಲಪಡಿಸಬೇಕು. ಇದು 100 ದಿನಗಳ ಅಭಿಯಾನವು ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮುಂದುವರಿಯುವ ಮಕ್ಕಳ ರಕ್ಷಣಾ ಆಂದೋಲನವಾಗಿ ರೂಪುಗೊಳ್ಳಲು ಸಹಕಾರಿಯಾಗಲಿದೆ ಎಂದ ಅವರು, ಪ್ರತಿಯೊಂದು ಮಗುವಿಗೂ ಶಿಕ್ಷಣ, ರಕ್ಷಣೆ, ಗೌರವ, ಸಮಾನ ಅವಕಾಶ ಮತ್ತು ಸುರಕ್ಷಿತ ಬಾಲ್ಯವನ್ನು ಖಚಿತಪಡಿಸುವ ಬಾಲ್ಯವಿವಾಹ ಮುಕ್ತ ಉಡುಪಿ ಜಿಲ್ಲೆಯನ್ನು ನಿರ್ಮಿಸುವುದು ನಮ್ಮೆಲ್ಲರ ಆಶಯವಾಗಲಿ ಎಂದರು.
ಸಭೆಯಲ್ಲಿ ಡಿ.ಹೆಚ್.ಓ ಡಾ. ಬಸವರಾಜ್ ಜಿ ಹುಬ್ಬಳ್ಳಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿ.ಡಿ.ಪಿ.ಓ ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.















