ಬೆಂಗಳೂರು: ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಕಟ್ಟಡ ಮಾಲೀಕರಿಗೆ ಇಂಧನ ಇಲಾಖೆ ಮಹತ್ವದ ಸಡಿಲಿಕೆ ನೀಡಿದೆ. ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವವರು, ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವವರು ಹಾಗೂ ಯಾವುದೇ ವಿದ್ಯುತ್ ಸಂಪರ್ಕವಿಲ್ಲದೆ ಕಟ್ಟಡ ಪೂರ್ಣಗೊಳಿಸಿರುವವರಿಗೆ ಸ್ವಾಧೀನಾನುಭವ ಪ್ರಮಾಣಪತ್ರ (Possession Certificate) ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ.
ಈ ಸೌಲಭ್ಯವು 2026ರ ಮೇ 31ರೊಳಗೆ ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಿರುವವರಿಗೆ ಮಾತ್ರ ಅನ್ವಯವಾಗಲಿದೆ. ಆದೇಶ ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಒಂದು ಬಾರಿಯ ವಿನಾಯಿತಿಯ ಮೂಲಕ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಅವಕಾಶ ನೀಡಲಾಗಿದೆ.
ಈ ಆದೇಶವು ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಮಹಾನಗರ ಪಾಲಿಕೆಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಡಗಳಿಗೆ ಅನ್ವಯವಾಗಲಿದೆ. 2,400 ಚದರ ಅಡಿಗಳವರೆಗಿನ ವಸತಿ ಕಟ್ಟಡಗಳು ಹಾಗೂ ಜಿ+3 ಅಥವಾ ಸ್ಟಿಲ್ಟ್ ಪಾರ್ಕಿಂಗ್ + 4 ಮಹಡಿಗಳ ವಸತಿ ಕಟ್ಟಡಗಳು ಇದರ ವ್ಯಾಪ್ತಿಗೆ ಒಳಪಡಲಿವೆ.
ಗ್ರಾಮೀಣ ಪ್ರದೇಶದ ರೈತರ ಮನೆ, ತೋಟದ ಮನೆ, ಕೃಷಿ ಉಪಕರಣಗಳನ್ನು ಸಂಗ್ರಹಿಸುವ ಮನೆ, ದನದ ಕೊಟ್ಟಿಗೆ ಹಾಗೂ ರೇಷ್ಮೆ ಗೂಡಿನ ಮನೆಗಳಿಗೂ ಈ ವಿನಾಯಿತಿ ವಿಸ್ತರಿಸಲಾಗಿದೆ. ಆದರೆ ಕಟ್ಟಡ ಮಾಲೀಕರು 15 ದಿನಗಳೊಳಗೆ ಕಟ್ಟಡದ ಭಾವಚಿತ್ರ ಹಾಗೂ ಜಿಪಿಎಸ್ ವಿವರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ವಿದ್ಯುತ್ ಸರಬರಾಜು ಕಂಪನಿಗಳು ಅನುಸರಿಸಬೇಕಾದ ಸಾಮಾನ್ಯ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗುವುದು ಎಂದು ಇಂಧನ ಇಲಾಖೆ ತಿಳಿಸಿದೆ. ಈ ಕ್ರಮದಿಂದ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯುವ ಪ್ರಕ್ರಿಯೆ ಮತ್ತಷ್ಟು ಸುಲಭವಾಗಲಿದೆ ಎಂಬ ವಿಶ್ವಾಸವನ್ನು ಸರ್ಕಾರ ವ್ಯಕ್ತಪಡಿಸಿದೆ.

















