ಇವತ್ತೇ ಸಚಿವ ಸಂಪುಟ ಪಟ್ಟಿಗೆ ಅಂತಿಮ ಮುದ್ರೆ,ಇಬ್ಬರು ಡಿಸಿಎಂ ಘೋಷಣೆ? ಹೈಕಮಾಂಡ್ ಸಭೆಯಲ್ಲಿ ಮಹತ್ವದ ನಿರ್ಧಾರ !

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಸರತ್ತು ಅಂತಿಮ ಹಂತ ತಲುಪಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ನೂತನ ಸಚಿವರ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡುವ ನಿರೀಕ್ಷೆಯಿದೆ. 18 ಹೊಸ ಸಚಿವರ ಜೊತೆಗೆ ಇಬ್ಬರಿಗೆ ಉಪ ಮುಖ್ಯಮಂತ್ರಿ (ಡಿಸಿಎಂ) ಹುದ್ದೆ ನೀಡುವ ಸಾಧ್ಯತೆಯೂ ಹೆಚ್ಚಿದ್ದು, ಇಂದೇ ಈ ಕುರಿತು ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ, ಸಂಪುಟ ಪುನಾರಚನೆ ಜೊತೆಗೆ ಡಿಸಿಎಂ ಹುದ್ದೆಗಳ ಬಗ್ಗೆಯೂ ಹೈಕಮಾಂಡ್ ಮಟ್ಟದಲ್ಲಿ ಗಂಭೀರ ಚರ್ಚೆ ನಡೆದಿದೆ. ಹಿರಿಯ ನಾಯಕ ಜಿ. ಪರಮೇಶ್ವರ್ ಸೇರಿದಂತೆ ಇನ್ನಿಬ್ಬರ ಹೆಸರನ್ನು ಡಿಸಿಎಂ ಹುದ್ದೆಗೆ ಪರಿಗಣಿಸಲಾಗಿದೆ ಎನ್ನಲಾಗುತ್ತಿದೆ. ಆದರೆ, ಈ ಕುರಿತು ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇತ್ತೀಚೆಗೆ ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಸಿದ್ದರು. ಇದೇ ಸಭೆಯಲ್ಲಿ ಸಚಿವರ ಪಟ್ಟಿ ಹಾಗೂ ಡಿಸಿಎಂ ಹುದ್ದೆಗಳ ಕುರಿತು ಅಂತಿಮ ಚರ್ಚೆ ನಡೆದಿರುವ ಮಾಹಿತಿ ಲಭ್ಯವಾಗಿದೆ.

ಇನ್ನೊಂದೆಡೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮತ್ತೊಂದು ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ರಾಹುಲ್ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಭಾಗವಹಿಸಿದ್ದು, ಡಿಸಿಎಂ ಹುದ್ದೆಗಳ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ರಾಜಕೀಯ ಹಾಗೂ ಸಾಮಾಜಿಕ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಲಿಂಗಾಯತ ಮತ್ತು ಅಹಿಂದ ಸಮುದಾಯಗಳಿಗೆ ತಲಾ ಒಂದು ಡಿಸಿಎಂ ಹುದ್ದೆ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.

ಸಚಿವರ ಪಟ್ಟಿಗೆ ಕೆಲವೇ ಕ್ಷಣಗಳಲ್ಲಿ ಅಂತಿಮ ಮುದ್ರೆ ಬೀಳಲಿದ್ದು, ಬೆಳಗ್ಗೆ 10ರಿಂದ 12 ಗಂಟೆಯೊಳಗೆ ನೂತನ ಸಚಿವರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸುವ ನಿರೀಕ್ಷೆ ಇದೆ. ಅಧಿಕೃತ ಪ್ರಕಟಣೆ ಬಳಿಕವೇ ಡಿಸಿಎಂ ಹುದ್ದೆಗಳ ಕುರಿತ ಊಹಾಪೋಹಗಳಿಗೆ ಸ್ಪಷ್ಟತೆ ಸಿಗಲಿದೆ.