ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಸಚಿವರು,ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು. ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ದಿನಾಂಕ ಪ್ರಕಟಿಸಲಾಗುವುದು ಎಂದರು.
ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಮನವಿ ಮಾಡಿದರು.
ಮೊದಲನೆ ಪಿಯು ವಿದ್ಯಾರ್ಥಿಗಳು ಉತ್ತೀರ್ಣ:
ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ, ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಕೊರೊನಾ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ. ಪ್ರಥಮ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಸುರೇಶ್ ಕುಮಾರ್ ತಿಳಿಸಿದ್ದಾರೆ.