ಎ.27ರಂದು ಕಾಂಗ್ರೆಸ್ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಉಡುಪಿ ಜಿಲ್ಲೆಗೆ ಆಗಮನ: ನಗರದಲ್ಲಿ ಅಶೋಕ್ ಕೊಡವೂರು 

ಉಡುಪಿ: ಕಾಂಗ್ರೆಸ್ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಎ.27ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಅಂದು ಅವರು ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ 40 ಮಂದಿ ಸ್ಟಾರ್ ಕ್ಯಾಂಪೆನ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಹಲವು ಮಂದಿ ನಾಯಕರು ಜಿಲ್ಲೆಗೆ ಆಗಮಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದರು.

ಎ.23ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೈಂದೂರಿಗೆ ಆಗಮಿಸಿ, ಮಧ್ಯಾಹ್ನ 3.30ಕ್ಕೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿರುವರು. ನಂತರ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ಎ.24ರಂದು ಮಧ್ಯಾಹ್ನ ಉಡುಪಿಗೆ ಆಗಮಿಸಿ ಮಧ್ಯಾಹ್ನ 3ಗಂಟೆಯಿಂದ ಸಂಜೆ 5ಗಂಟೆವರೆಗೆ ಉಡುಪಿ ಸರ್ವಿಸ್ ಬಸ್ ನಿಲ್ದಾಣದಿಂದ ಅಜ್ಜರಕಾಡಿನ ಹುತಾತ್ಮ ಚೌಕದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದರಲ್ಲಿ 5-10ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಅಶೋಕ್ ಕುಮಾರ್ ಕೊಡವೂರು, ಪ್ರಸಾದ್ ರಾಜ್ ಕಾಂಚನ್, ಎಂ.ಎ.ಗಪೂರ್, ಕಿಶನ್ ಹೆಗ್ಗಡೆ ಕೋಲ್ಕೆಬೈಲ್, ಭಾಸ್ಕರ್ ರಾವ್ ಕಿದಿಯೂರು, ರಮೇಶ್ ಕಾಂಚನ್, ದಿನಕರ ಹೇರೂರು, ಬಿ.ನರಸಿಂಹಮೂರ್ತಿ, ಪ್ರಖ್ಯಾತ್ ಶೆಟ್ಟಿ, ಕುಶಲ ಶೆಟ್ಟಿ, ಅಮೃತ್ ಶೆಣೈ, ಮಹಬಲ ಕುಂದರ್, ಹರೀಶ್ ಶೆಟ್ಟಿ ಪಾಂಗಾಳ ಭಾಗವಹಿಸಿದ್ದರು.