ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಸಂಪೂರ್ಣ ರದ್ದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ರದ್ದುಗೊಳಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರವು ಭಾರತೀಯ ಸಂವಿಧಾನಕ್ಕೆ ಅನುಗುಣವಾಗಿ ಶಿಕ್ಷಣ ನೀತಿಯನ್ನು ಬದಲಾಯಿಸುತ್ತದೆ ಮತ್ತು ರಾಜ್ಯ ಶಿಕ್ಷಣ ನೀತಿಯನ್ನು (ಎಸ್‌ಇಪಿ) ಪರಿಚಯಿಸಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರವು ಎನ್‌ಇಪಿ ಮೂಲಕ ಶಿಕ್ಷಣದಲ್ಲಿ ಆರ್‌ಎಸ್‌ಎಸ್ ಅಜೆಂಡಾವನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವರ್ಷದ ಮಧ್ಯದಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲತೆಯನ್ನು ತಪ್ಪಿಸಲು ಎನ್‌ಇಪಿಯನ್ನು ಈ ವರ್ಷ ಮುಂದುವರಿಸಲು ನಿರ್ಧರಿಸಿದ್ದೇವೆ ಮುಂದಿನ ವರ್ಷ ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದಿದ್ದಾರೆ.

ಎನ್‌ಇಪಿ ಅನ್ನು ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಮತ್ತು ಶಿಕ್ಷಕರು ಏಕಕಾಲದಲ್ಲಿ ವಿರೋಧಿಸಿದ್ದಾರೆ. ದೇಶದಲ್ಲಿ ಇತರ ರಾಜ್ಯಗಳು ಎನ್‌ಇಪಿ ಜಾರಿಗೊಳಿಸುವ ಮೊದಲು ಬಿಜೆಪಿ ರಾಜ್ಯದಲ್ಲಿ ಎನ್‌ಇಪಿ ಜಾರಿಗೊಳಿಸುವ ಮೂಲಕ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ತ್ಯಾಗ ಮಾಡಿದೆ ಎಂದು ಹೇಳಿದ್ದಾರೆ.

ಎಸ್‌ಇಪಿಯನ್ನು ಜಾರಿಗೊಳಿಸುವುದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಚುನಾವಣಾ ಭರವಸೆಯಾಗಿತ್ತು. ಬಿಜೆಪಿ ಅಧಿಕಾರದಲ್ಲಿದ್ದಾಗ ಶಾಲಾ ಪಠ್ಯಪುಸ್ತಕಗಳಲ್ಲಿ ಮಾಡಿದ ಬದಲಾವಣೆಗಳನ್ನು ರದ್ದುಗೊಳಿಸುವುದಾಗಿ ಪಕ್ಷವು ಭರವಸೆ ನೀಡಿತ್ತು.