ಉಡುಪಿ: ಇಲ್ಲಿನ ಬಿಜೆಪಿ ಅಭ್ಯರ್ಥಿ ಯಶ್ ಪಾಲ ಸುವರ್ಣ ಇಂದು ಕಳ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಲೋನಿಗಳಿಗೆ ಕಾರ್ಯಕರ್ತರೊಂದಿಗೆ ಭೇಟಿ ನೀಡಿ ಮತ ಯಾಚನೆ ಮಾಡಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಡುಪಿಯನ್ನು ಮಾದರಿ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡುವ ಗುರಿ ನನ್ನದು. ಡಾ.ವಿ ಎಸ್ ಆಚಾರ್ಯರವರ ಅಭಿವೃದ್ಧಿಯ ಕನಸನ್ನು ನನಸು ಮಾಡಿ ಉಡುಪಿಯನ್ನು 224 ಕ್ಷೇತ್ರಗಳಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದರು.
ಕಳೆದ ಕೆಲವು ವರ್ಷಗಳಿಂದ ರಘುಪತಿ ಭಟ್ ಉಡುಪಿಯ ಅಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಅಭಿವೃದ್ದಿಗೆ ಪಣ ತೊಟ್ಟಿದ್ದೇವೆ. ಈಗಾಗಲೇ ಸರ್ಕಾರಿ ಕಾಲೇಜು, 24 ಗಂಟೆ ಕುಡಿಯುವ ನೀರಿನ ಸೌಲಭ್ಯ, ಶಿಕ್ಷಣ ಕ್ಷೇತ್ರಕ್ಕೆ ಒತ್ತು, ಸಹಕಾರಿ ಹಾಗೂ ಕೃಷಿ ಕ್ಷೇತ್ರಕ್ಕೆ ಉತ್ತೇಜನ, ಮೀನುಗಾರಿಕಾ ಕ್ಷೇತ್ರದ ಬಲವರ್ಧನೆ, ಮೂಲ ಸೌಕರ್ಯ ಮತ್ತು ಉದ್ಯೋಗವನ್ನು ಸೃಷ್ಟಿಸುವ ಮೂಲಕ ಯುವಜನತೆಗೆ ಆದ್ಯತೆ ನೀಡುವುದು ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರದ ಮತ್ತು ರಾಜ್ಯದ ಅಭಿವೃದ್ದಿ ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಕಾರ್ಯ ಮಾಡಲಾಗಿದ್ದು, ಅದನ್ನೇ ಮುನ್ನಲೆಯಾಗಿಟ್ಟುಕೊಂಡು ಮನೆ ಮನೆಗೆ ತೆರಳಿ ಮತ ಯಾಚಿಸಲಾಗುವುದು.
ಈ ಸಂದರ್ಭದಲ್ಲಿ ತಮಗೆ ಅವಕಾಶ ಕೊಟ್ಟ ಪಕ್ಷದ ಹಿರಿಯ ನಾಯಕರು ಹಾಗೂ ಬೆಂಬಲ ನೀಡಿದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.