ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಂಪೂರ್ಣ ಸಹಕಾರ: ಸಚಿವ ಯು.ಟಿ. ಖಾದರ್

ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಮಂಗಳವಾರ ಬಾರ್ಕೂರಿನ ಇತಿಹಾಸ ಪ್ರಸಿದ್ಧ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳ ಕುರಿತು ಸಮಿತಿಯ ಸದಸ್ಯರೊಂದಿಗೆ ಚರ್ಚೆ ನಡೆಸಿದರು.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಹವಾಲುಗಳನ್ನು ಆಲಿಸಿದ ಸಚಿವರು, ಸಮಗ್ರ ಜೀರ್ಣೋದ್ಧಾರ ಹಾಗೂ ದೇವಸ್ಥಾನದ ಅಭಿವೃದ್ಧಿಗೆ ಸರ್ಕಾರದ ಮಟ್ಟದಲ್ಲಿ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾರ್ಕೂರು ಪಂಚಲಿಂಗೇಶ್ವರ ದೇವಸ್ಥಾನವು ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಪವಿತ್ರ ಕ್ಷೇತ್ರವಾಗಿದೆ. ಇಂತಹ ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವದ ದೇವಸ್ಥಾನಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ, ಕಾರ್ಯಾಧ್ಯಕ್ಷ ಬಿ. ಶಾಂತಾರಾಮ ಶೆಟ್ಟಿ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.