ಉಡುಪಿ, ಸೆಪ್ಟೆಂಬರ್ 8, 2026:
ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (PIM), ಉಡುಪಿಯಲ್ಲಿ ಮಂಗಳವಾರ “ಪೂರ್ಣ ಉದ್ಯೋಗ ಮೇಳ 2026” ಮೆಗಾ ಉದ್ಯೋಗ ಮೇಳವನ್ನು ಆಯೋಜಿಸಲಾಯಿತು.
ಮೇಳದಲ್ಲಿ 25ಕ್ಕೂ ಅಧಿಕ ಕಂಪನಿಗಳು ಭಾಗವಹಿಸಿ 200ಕ್ಕೂ ಹೆಚ್ಚು ಪೂರ್ಣಪ್ರಜ್ಞ ಸಮೂಹ ಸಂಸ್ಥೆಗಳ ಪ್ರಸ್ತುತ ಹಾಗೂ ಹಳೆ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅವಕಾಶವನ್ನು ಒದಗಿಸಿದವು. ವಿವಿಧ ಕ್ಷೇತ್ರಗಳ ಕಂಪನಿಗಳ ಪ್ರತಿನಿಧಿಗಳು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ಪರಿಶೀಲಿಸಿದರು.
ಕಾರ್ಯಕ್ರಮವನ್ನು ಸಂಸ್ಥೆಯ ನಿರ್ದೇಶಕರು ಹಾಗೂ ವಿವಿಧ ಕಂಪನಿಗಳ ಪ್ರತಿನಿಧಿಗಳು ಜಂಟಿಯಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು, ವಿದ್ಯಾರ್ಥಿಗಳು ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉದ್ಯಮ ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ತಮ್ಮ ಕೌಶಲ್ಯಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಪೂರ್ಣಾಕಾಶ್ – ತರಬೇತಿ ಮತ್ತು ಉದ್ಯೋಗ ನಿಯೋಜನಾ ಘಟಕ, PIM ಅಲ್ಯುಮ್ನಿ ಅಸೋಸಿಯೇಷನ್ ಹಾಗೂ PHRONESIS – ದಿ HR ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ಮೇಳವನ್ನು ಆಯೋಜಿಸಲಾಗಿತ್ತು.
ಉದ್ಯೋಗ ಮೇಳವು ವಿದ್ಯಾರ್ಥಿಗಳಿಗೆ ನೇರವಾಗಿ ಕಂಪನಿಗಳೊಂದಿಗೆ ಸಂಪರ್ಕ ಸಾಧಿಸಲು ಹಾಗೂ ಕೈಗಾರಿಕಾ ಕ್ಷೇತ್ರದ ನೇಮಕಾತಿ ಪ್ರಕ್ರಿಯೆಯ ಬಗ್ಗೆ ಪ್ರಾಯೋಗಿಕ ಅನುಭವ ಪಡೆಯಲು ಉತ್ತಮ ವೇದಿಕೆಯಾಯಿತು. ಮೇಳದ ಯಶಸ್ಸಿಗೆ ಸಹಕರಿಸಿದ ಎಲ್ಲಾ ಕಂಪನಿಗಳು, ಹಳೆಯ ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿ ಸ್ವಯಂಸೇವಕರಿಗೆ ಆಯೋಜಕರು ಕೃತಜ್ಞತೆ ಸಲ್ಲಿಸಿದರು.















