ತೂಗುಸೇತುವೆ ಹರಿಕಾರ ಗಿರೀಶ್ ಭಾರದ್ವಾಜ್ ಗೆ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

ಉಡುಪಿ: ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ವತಿಯಿಂದ ನೀಡಲಾಗುವ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ತೂಗು ಸೇತುವೆ ಸರದಾರ ಸುಳ್ಯದ ಗಿರೀಶ್ ಭಾರದ್ವಾಜ್ ಅವರು ಆಯ್ಕೆಯಾಗಿದ್ದಾರೆ.

ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯ ಯು. ಎಸ್. ಶೆಣೈ ಈ ಬಗ್ಗೆ ಮಾಹಿತಿ ನೀಡಿದರು.

ಕಾರಂತ ಜನ್ಮದಿನೋತ್ಸವ ಅಂಗವಾಗಿ ಕೋಟ ಶಿವರಾಮ ಕಾರಂತ ಥೀಂ ಪಾರ್ಕ್ ನಲ್ಲಿ ಅಕ್ಟೋಬರ್ 1ರಿಂದ 10 ರವರೆಗೆ ಆನ್ಲೈನ್ ಮೂಲಕ ವಿವಿಧ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅ. 10ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

ಗಿರೀಶ್ ಅವರು 130ಕ್ಕೂ ಹೆಚ್ಚು ತೂಗು ಸೇತುವೆ ನಿರ್ಮಾಣ ಮಾಡುವ ಮೂಲಕ ಗ್ರಾಮೀಣ ಜನರ ಜೀವನದಲ್ಲಿ ಹೊಸ ಬೆಳಕು ಮೂಡಿಸಿದ್ದಾರೆ. ಕೇಂದ್ರ ಸರ್ಕಾರದ ಪದ್ಮಶ್ರೀ ಹಾಗೂ ರಾಜ್ಯ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕೋಟ ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಕೋಟತಟ್ಟು ಗ್ರಾಪಂ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಪಿಡಿಒ ಶೈಲ ಪೂಜಾರಿ ಉಪಸ್ಥಿತರಿದ್ದರು.