ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದು ಎಂದು ರಾಜ್ಯ ಸರ್ಕಾರ ಸೂಚಿಸಿದೆ.
ಇಂತಹ ಕಾಣಿಕೆಗಳನ್ನು ನೀಡುವ ಬದಲು ಕನ್ನಡ ಪುಸ್ತಕಗಳನ್ನು ನೀಡಬಹುದು ಎಂದು ಸರ್ಕಾರ ಸಲಹೆ ನೀಡಿದೆ.
ಈ ನಿರ್ದೇಶನವನ್ನು ಚಾಚು ತಪ್ಪದೇ ಅನುಷ್ಟಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲಾ ಸಂಸ್ಥೆಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಅಧಿಕಾರಿಗಳಿಗೆ ಸೂಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಆದೇಶ ಹೊರಡಿಸಿದ್ದಾರೆ.












