ಉಡುಪಿ: ಜಿಲ್ಲೆಯ ಜನರ ಹಲವು ದಶಕಗಳ ಬೇಡಿಕೆಯಂತೆ ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಅದೇ ರೀತಿ ಸರ್ಕಾರ ಇತ್ತೀಚಿಗೆ ರೂಪಿಸಿದ ಪಿಪಿಪಿ ಮಾದರಿ ಮೆಡಿಕಲ್ ಕಾಲೇಜುಗಳ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯೂ ಇದೆ. ಅದರಂತೆ ಜಿಲ್ಲೆಗೆ ಪಿಪಿಪಿ ಮಾದರಿಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
200 ಬೆಡ್ ಗಳ ಬಿಆರ್ ಎಸ್ ಆಸ್ಪತ್ರೆಯನ್ನು ಸರ್ಕಾರವೇ ವಹಿಸಿಕೊಳ್ಳಲು ತಾತ್ವಿಕ ಒಪ್ಪಿಗೆ ನೀಡಲಾಗಿದ್ದು, ಇದರಿಂದ ಈ ಭಾಗದ ಜನರಿಗೆ ನಿರಂತರ ಆರೋಗ್ಯ ಸೇವೆ ಲಭಿಸಲಿದೆ ಎಂದರು.
ಶಾಸಕ ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ , ಇಂಧನ ಸಚಿವ ವಿ.ಸುನೀಲ್ ಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ಲಾಲಾಜಿ ಆರ್ ಮೆಂಡನ್, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎ.ರಾಘವೇಂದ್ರ ಕಿಣಿ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಭಾಗವಹಿಸಿದ್ದರು.












