ಸಾರ್ವಜನಿಕ‌ವಾಗಿ ಗಣೇಶೋತ್ಸವ ಆಚರಣೆಗೆ ಸರ್ಕಾರದಿಂದ ಷರತ್ತುಬದ್ಧ ಅನುಮತಿ: ಪರಿಷ್ಕೃತ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಷರತ್ತು ಬದ್ಧ ಅನುಮತಿ ನೀಡಿದೆ. ಆಚರಣೆಗೆ ಸಂಬಂಧಿಸಿ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಮಾರ್ಗಸೂಚಿಯ ವಿವರ:
ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಜನರ ಕೂಡುವಿಕೆಯೊಂದಿಗೆ ಆಚರಿಸಬೇಕು.

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸುವವರು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ‌ ಮೀರದಂತೆ ಗಣೇಶನ ಮೂರ್ತಿ ಪ್ರತಿಷ್ಠಾಪಿಸಬೇಕು.
ಗಣೇಶನ ವಿಗ್ರಹ ಪ್ರತಿಷ್ಠಾಪನೆಗೆ ನಗರಸಭೆ, ಸ್ಥಳೀಯ ಆಡಳಿತದ ಪೂರ್ವಾನುಮತಿ ಕಡ್ಡಾಯವಾಗಿ ಪಡೆಯಬೇಕು. ಒಂದು ವಾರ್ಡ್ ಅಥವಾ ಗ್ರಾಮಕ್ಕೆ ಒಂದು ಗಣೇಶೋತ್ಸವ ಆಚರಣೆಗೆ ಪ್ರೋತ್ಸಾಹ ನೀಡಬೇಕು.

ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಮೊದಲಾದ ಮನೋರಂಜನಾ ಕಾರ್ಯಕ್ರಮ ಆಯೋಜಿಸಲು ಅವಕಾಶವಿಲ್ಲ. ಗಣೇಶನ ವಿಗ್ರಹ ತರುವಾಗ ಹಾಗೂ ವಿಸರ್ಜನೆ ಮಾಡುವಾಗ ಮೆರವಣಿಗೆ ಮಾಡುವುದನ್ನು ನಿರ್ಬಂಧಿಸಲಾಗಿದೆ. ಈ ಮೊದಲಾದ ಷರತ್ತುಗಳನ್ನು ವಿಧಿಸಿ ಗಣೇಶೋತ್ಸವ ಆಚರಣೆಗೆ ಸರ್ಕಾರ ಅನುಮತಿ ನೀಡಿದೆ.

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆ ಮಾಡುವವರು ಸರ್ಕಾರ ಹೊರಡಿಸಿರುವ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಕಾಯ್ದೆ ಸೆಕ್ಷನ್ 188ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.