ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಗೆ ಕಡಿವಾಣ ಹಾಕುವ ಹಾಗೂ ಸಂಚಾರ ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ರಾಜ್ಯದ ಆಯ್ದ 87 ಅಪಘಾತ ವಲಯಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಸ್ಮಾರ್ಟ್ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 24ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗುರುತಿಸಿರುವ 87 ಸ್ಥಳಗಳ ಪೈಕಿ ಈಗಾಗಲೇ 27 ಕಡೆ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಪೈಕಿ 20 ಸ್ಥಳಗಳಲ್ಲಿ ಇ-ಚಲನ್ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಈ ಮೂಲಕ 6,500 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ದಂಡ ವಿಧಿಸಲಾಗಿದೆ ಎಂದು ತಿಳಿಸಿದರು.
ಉಳಿದ 60 ಸ್ಥಳಗಳಲ್ಲಿ ಕ್ಯಾಮೆರಾ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. ರಾಜ್ಯ ಸರ್ಕಾರ ಮತ್ತು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಗುರುತಿಸಿರುವ ಅಪಘಾತದ ಅಪಾಯಕಾರಿ ಸ್ಥಳಗಳಲ್ಲಿ ಅಲ್ಪಾವಧಿ ಮತ್ತು ದೀರ್ಘಾವಧಿಯ ರಸ್ತೆ ಸುರಕ್ಷತಾ ಸುಧಾರಣಾ ಕಾಮಗಾರಿಗಳನ್ನೂ ತ್ವರಿತಗೊಳಿಸಲಾಗುತ್ತಿದೆ ಎಂದರು.
ರಾಜ್ಯದಲ್ಲಿ ವಾಹನಗಳ ನೋಂದಣಿ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದ್ದರೂ, ಪ್ರತಿ 10 ಸಾವಿರ ವಾಹನಗಳಿಗೆ ಸಂಭವಿಸುವ ಅಪಘಾತಗಳ ಪ್ರಮಾಣ ಶೇ.27ರಷ್ಟು ಇಳಿಕೆಯಾಗಿದೆ. 2018ರಲ್ಲಿ 17.28ರಷ್ಟಿದ್ದ ಈ ಪ್ರಮಾಣ 2025ರಲ್ಲಿ 12.56ಕ್ಕೆ ಕುಸಿದಿದೆ. ಇದೇ ಅವಧಿಯಲ್ಲಿ ಸಾವಿನ ಪ್ರಮಾಣವೂ ಶೇ.21ರಷ್ಟು ಇಳಿಕೆಯಾಗಿದ್ದು, 4.55ರಿಂದ 3.59ಕ್ಕೆ ತಗ್ಗಿದೆ ಎಂದು ವಿವರಿಸಿದರು.
2026ರ ಜನವರಿಯಿಂದ ಅಕ್ಟೋಬರ್ವರೆಗೆ ರಾಜ್ಯದಲ್ಲಿ ಒಟ್ಟು 37,443 ರಸ್ತೆ ಅಪಘಾತಗಳು ಸಂಭವಿಸಿವೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಅಪಘಾತಗಳಲ್ಲಿ ಮೃತಪಟ್ಟವರ ಸಂಖ್ಯೆ 220ರಷ್ಟು ಕಡಿಮೆಯಾಗಿದೆ ಎಂದು ತಿಳಿಸಿದರು.
ಇನ್ನು ಪ್ರಧಾನಮಂತ್ರಿ ರಾಹತ್ ಮತ್ತು ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಗಳಡಿ ರಸ್ತೆ ಅಪಘಾತದ ಸಂತ್ರಸ್ತರು ₹2.5 ಲಕ್ಷದವರೆಗೆ ನಗದುರಹಿತ ಚಿಕಿತ್ಸಾ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ. ಈ ಯೋಜನೆಗಳಿಗಾಗಿ ರಾಜ್ಯದ 3,445 ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ನೋಂದಣಿಯಾಗಿವೆ.
ಅಪಘಾತ ಸಂತ್ರಸ್ತರಿಗೆ ತುರ್ತು ಚಿಕಿತ್ಸೆ ಒದಗಿಸುವ ಉದ್ದೇಶದಿಂದ 100 ಹೊಸ ಮೂಲಭೂತ ಜೀವ ರಕ್ಷಕ ಆಂಬುಲೆನ್ಸ್ಗಳ ಖರೀದಿ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಲಾಗಿದೆ. ಶೀಘ್ರದಲ್ಲೇ ಈ ಆಂಬುಲೆನ್ಸ್ಗಳನ್ನು ಸೇವೆಗೆ ನಿಯೋಜಿಸಲಾಗುವುದು ಎಂದು ಶಾಲಿನಿ ರಜನೀಶ್ ತಿಳಿಸಿದರು.















